
ದಾವಣಗೆರೆ, 09 ನವೆಂಬರ್ (ಹಿ.ಸ.):
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡಿದೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಜನಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ತಿಳಿಸಿದರು.
ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಸೇರಿದಂತೆ ವಿವಿಧೆಡೆ ಒಟ್ಟು ₹31.82 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಕೆಲವು ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತ್ ಜೋಡೋ ಯಾತ್ರೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೂ ಸಮಾನ ಆದ್ಯತೆ ನೀಡಲಾಗುತ್ತಿದೆ ಎಂದರು.
ಬಿಳಿಚೋಡು ಗ್ರಾಮ ರಾಜಕೀಯ, ಸಾಮಾಜಿಕ ಹಾಗೂ ಐತಿಹಾಸಿಕವಾಗಿ ವಿಶೇಷ ಹಿನ್ನೆಲೆ ಹೊಂದಿದೆ. ಅಶ್ವತ್ಥರೆಡ್ಡಿ ಅವರಂತಹ ನಾಯಕರು ಈ ಗ್ರಾಮದಲ್ಲಿ ಬೆಳೆದು ಬಂದಿದ್ದಾರೆ. ಆಂಜನೇಯ ಸ್ವಾಮಿ ಗ್ರಾಮದ ಆರಾಧ್ಯ ದೈವವಾಗಿದ್ದು, ಚನ್ನಯ್ಯ ಒಡೆಯರ್ ಹಾಗೂ ಭೀಮಣ್ಣ ನಾಯಕ ಅವರಂತಹ ಮಹನೀಯರು ಜನಿಸಿದ ಪುಣ್ಯಭೂಮಿ ಇದಾಗಿದೆ ಎಂದು ಸ್ಮರಿಸಿದರು.
ಸಿರಿಗೆರೆ ಶ್ರೀಗಳು ಜನಪರ ಕಾಳಜಿಯಿಂದ ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಜನರಿಗೆ ಮೌಲ್ಯಯುತ ಸಂದೇಶಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.
ರಾಜ್ಯದಲ್ಲಿ ಪರಿಶಿಷ್ಟ ವರ್ಗಗಳ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸುಮಾರು ₹10 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದ್ದರೂ, ಅದು ಅರ್ಹ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪರಿಷತ್ತಿನ ಸಭೆ ಕರೆದು ಅನುದಾನದ ಸದ್ಬಳಕೆ ಹಾಗೂ ಸಮುದಾಯಗಳಿಗೆ ಸೌಲಭ್ಯ ತಲುಪಿಸುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ತಮ್ಮ ರಾಜಕೀಯ ಹಾಗೂ ಸಾರ್ವಜನಿಕ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡಲಾಗಿದೆ. ಅಧಿಕಾರ ಎನ್ನುವುದು ಜನಸೇವೆ ಮಾಡಲು ದೊರೆತ ಅವಕಾಶವಾಗಿದ್ದು, ಅದನ್ನು ಜನರ ಕಲ್ಯಾಣಕ್ಕಾಗಿ ಬಳಸಿಕೊಳ್ಳಬೇಕು ಎಂದರು.
ಅಧಿಕಾರಕ್ಕಾಗಿ ಪ್ರತಿಪಕ್ಷಗಳು ಕಾಯುತ್ತಿವೆ
ವಿರೋಧ ಪಕ್ಷದವರು ಅಧಿಕಾರಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿದಿದ್ದು, ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸಚಿವ ಟಿ. ರಘುಮೂರ್ತಿ ಹೇಳಿದರು.
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು ₹16 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸರ್ಕಾರದ ಜನಪರ ಕಾರ್ಯಗಳನ್ನು ಗುರುತಿಸುವ ಬದಲು ವಿರೋಧ ಪಕ್ಷದವರು ವೈಯಕ್ತಿಕ ಟೀಕೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇಂತಹ ಟೀಕೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವ ಅನುದಾನ ಹಾಗೂ ಯೋಜನೆಗಳನ್ನು ತಂದಿದ್ದಾರೆ ಎಂಬುದನ್ನು ವಿರೋಧ ಪಕ್ಷದವರು ಜನರಿಗೆ ತಿಳಿಸಬೇಕು ಎಂದು ಸವಾಲು ಹಾಕಿದರು.
ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, ಸಚಿವ ಟಿ. ರಘುಮೂರ್ತಿ ಅವರು ಮೂರು ಬಾರಿ ಶಾಸಕರಾಗಿ ಜನರ ವಿಶ್ವಾಸ ಗಳಿಸಿ ಸಚಿವ ಸ್ಥಾನ ಅಲಂಕರಿಸಿದ್ದಾರೆ. ಅವರ ಸಾರ್ವಜನಿಕ ಸೇವೆ ಹಾಗೂ ಕಾರ್ಯವೈಖರಿ ಮಾದರಿಯಾಗಿದೆ ಎಂದರು.
ಚಿಕ್ಕಮ್ಮನಹಟ್ಟಿ ಸೇರಿದಂತೆ ತಾಲೂಕಿನ ಕುಗ್ರಾಮಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಪರಿಹರಿಸುವುದರೊಂದಿಗೆ ಹಳ್ಳಿಯಿಂದ ದೆಹಲಿಯವರೆಗೆ ನಮ್ಮ ಭಾಗದ ಜನರ ಧ್ವನಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಕಡಬನಕಟ್ಟೆ ಸೇರಿದಂತೆ ಹಲವು ಗ್ರಾಮಗಳು ರಾಜಕೀಯವಾಗಿ ವಿಶಿಷ್ಟ ಇತಿಹಾಸ ಹೊಂದಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಗುರುಬಸವರಾಜ್, ಕೆಂಚಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಶಿಕಾಂತ್, ಜಿಲ್ಲಾ ಪಂಚಾಯಿತಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿ. ತಿಪ್ಪೇಸ್ವಾಮಿ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಓಮಣ್ಣ, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ಪಟೇಲ್, ಮುಖಂಡ ರಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.