
ತುಮಕೂರು, 09 ನವೆಂಬರ್ (ಹಿ.ಸ.):
ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಿರುವ ದಾಖಲೆ ರಹಿತ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಒಟ್ಟು 1,389 ಕುಟುಂಬಗಳಿಂದ ಹಕ್ಕುಪತ್ರ ವಿತರಣೆಗೆ ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಬೇಕಿದ್ದು, ಈವರೆಗೆ ಕೇವಲ 310 ಕುಟುಂಬಗಳ ದಾಖಲೆಗಳನ್ನು ಮಾತ್ರ ಪಡೆಯಲಾಗಿದೆ. ಉಳಿದ ಕುಟುಂಬಗಳಿಂದ ದಾಖಲೆಗಳ ಸಂಗ್ರಹಣೆ ಬಾಕಿ ಇರುವ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಕುಟುಂಬಗಳು ತಮ್ಮ ವಾಸಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಗುರುತಿನ ಚೀಟಿಗಳನ್ನು ವಿಳಂಬ ಮಾಡದೆ ಅಧಿಕಾರಿಗಳಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಅರ್ಹ ಕುಟುಂಬಗಳು ದಾಖಲೆಗಳ ಕೊರತೆಯಿಂದ ಹಕ್ಕುಪತ್ರ ಪಡೆಯುವ ಅವಕಾಶದಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಕುಟುಂಬಗಳಿಗೆ ಮಾಹಿತಿ ನೀಡಿ, ದಾಖಲೆಗಳನ್ನು ಸಲ್ಲಿಸಲು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಸರ್ವೆ ಕಾರ್ಯ ಪೂರ್ಣಗೊಂಡಿರುವ ಸ್ಲಂ ಪ್ರದೇಶಗಳ ಕುಟುಂಬವಾರು ಮಾಹಿತಿಯನ್ನು ಸಿದ್ಧಪಡಿಸಿ, ಪ್ರತಿಯೊಂದು ಕುಟುಂಬದ ಅಗತ್ಯ ದಾಖಲೆಗಳನ್ನು ಸಂಬಂಧಪಟ್ಟ ತಹಶೀಲ್ದಾರರಿಗೆ ಸಲ್ಲಿಸುವಂತೆ ಸೂಚಿಸಿದರು.
ಇದೇ ವೇಳೆ ಮರಳೂರು ದಿಣ್ಣೆ, ಭಾರತಿನಗರ ಹಾಗೂ ಎಸ್.ಎನ್. ಪಾಳ್ಯ ಪ್ರದೇಶಗಳಲ್ಲಿ ಸರ್ವೆ ಕಾರ್ಯ ಇನ್ನೂ ಬಾಕಿ ಉಳಿದಿರುವುದಾಗಿ ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು, ಈ ಪ್ರದೇಶಗಳಲ್ಲಿ ಬಾಕಿ ಇರುವ ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ತುಮಕೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.