
ಶಿವಮೊಗ್ಗ, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಪರಿಸರ ಸಂರಕ್ಷಣೆ ಹಾಗೂ ನಗರವನ್ನು ಹಸಿರು–ಸುಂದರವಾಗಿಸುವ ಉದ್ದೇಶದಿಂದ ರೂ.43 ಕೋಟಿ ವೆಚ್ಚದಲ್ಲಿ ಸೂಡಾ (ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ) ವ್ಯಾಪ್ತಿಯಲ್ಲಿ ಒಟ್ಟು 15 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದ್ದಾರೆ.
ನಗರದ ಪ್ರಿಯದರ್ಶಿನಿ ಬಡಾವಣೆಯ ಆಲ್ಕೊಳ ಗ್ರಾಮದ ಸರ್ವೇ ನಂ.110ರ ಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ನೀಡಿದ ಅವರು, ಕೆರೆಗಳಲ್ಲಿ ಹೂಳು ತೆಗೆಯುವುದು, ಸುತ್ತಲೂ ಬೇಲಿ ಅಳವಡಿಸುವುದು, ಬಂಡಿಂಗ್ ಕಾಮಗಾರಿ, ಗಿಡಗಳನ್ನು ನೆಡುವುದು ಹಾಗೂ ಮಕ್ಕಳಿಗಾಗಿ ಆಟೋಪಕರಣಗಳನ್ನು ಅಳವಡಿಸುವಂತಹ ಕಾರ್ಯಗಳು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಚರಂಡಿ ನೀರು ಕೆರೆಗಳಿಗೆ ಸೇರುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಕೆಲವು ಕೆರೆಗಳನ್ನು ಐಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಪರಿಸರ ಸಂರಕ್ಷಣೆಯೊಂದಿಗೆ ಅಂತರ್ಜಲ ಮಟ್ಟವೂ ಹೆಚ್ಚಲಿದೆ ಎಂದು ತಿಳಿಸಿದರು.
ನಗರದಲ್ಲಿ ಇತ್ತೀಚೆಗೆ ಉಷ್ಣಾಂಶ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಸಿರು ಪ್ರದೇಶಗಳನ್ನು ವೃದ್ಧಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 40 ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಇದೀಗ 50 ಪಾರ್ಕ್‌ಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಹೆಚ್.ಎಸ್. ಸುಂದರೇಶ್ ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa