
ಬೆಂಗಳೂರು, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಉಚ್ಚ ನ್ಯಾಯಾಲಯದ ಆದೇಶದ ಅನ್ವಯ ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿತು.
ಪ್ರತಿಭಟನೆಯಲ್ಲಿ ವಿಧಾನ ಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಭಾಗಿಯಾಗಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿರುವ ಯುವಜನರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದರು.
ಖಾಲಿ ಹುದ್ದೆಗಳ ಭರ್ತಿಯಲ್ಲಿ ವಿಳಂಬವಾಗುತ್ತಿರುವುದು ಯುವಕರ ಭವಿಷ್ಯಕ್ಕೆ ಅನ್ಯಾಯವಾಗುತ್ತಿದೆ. ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಆರಂಭಿಸಿ, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅರವಿಂದ ಬೆಲ್ಲದ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೇರಿದಂತೆ ಅನೇಕ ಉದ್ಯೋಗಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa