
ಕಾರವಾರ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಸ್ಕೋಡ ಗ್ರಾಮದ ಬಳಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಹೊಸ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳವರೆಗೆ ನೇರ ಸಂಪರ್ಕ ಕಲ್ಪಿಸುವ ಈ ಸೇತುವೆ ಕರಾವಳಿ ಭಾಗದ ಜನರ ದಶಕಗಳ ಕನಸಾಗಿತ್ತು. ಮಳೆಗಾಲದಲ್ಲಿ ನದಿ ತುಂಬಿ ಹರಿಯುವ ಸಂದರ್ಭದಲ್ಲಿ ಜನರು ಎದುರಿಸುತ್ತಿದ್ದ ಸಂಚಾರದ ತೊಂದರೆಗಳಿಗೆ ಇದೀಗ ಶಾಶ್ವತ ಪರಿಹಾರ ದೊರೆತಿದೆ ಎಂದರು.
ಸೇತುವೆ ನಿರ್ಮಾಣದಿಂದ ಸ್ಥಳೀಯ ರೈತರು, ಮೀನುಗಾರರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೃಷಿ ಉತ್ಪನ್ನಗಳು ಮತ್ತು ಮೀನುಗಾರಿಕಾ ವಸ್ತುಗಳ ಸಾಗಣೆ ಸುಗಮವಾಗಿ ಹಾಗೂ ವೇಗವಾಗಿ ನಡೆಯಲಿದ್ದು, ಗ್ರಾಮೀಣ ಆರ್ಥಿಕತೆಗೆ ಹೊಸ ಚೈತನ್ಯ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.
ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಮೂಲಸೌಕರ್ಯ ವಿಸ್ತರಣೆಯ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa