ಬೆಂಗಳೂರಿನಲ್ಲಿ ಎಲ್ಪಿಜಿ ಕೊರತೆ: ಹೋಟೆಲ್ ಉದ್ಯಮ ಸಂಕಷ್ಟಕ್ಕೆ
ಬೆಂಗಳೂರು, 10 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಸಂಘರ್ಷ ಪರಿಣಾಮ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೂ ತೀವ್ರ ಪರಿಣಾಮ ಬೀರುವ ಲಕ್ಷಣಗಳು ಕಾಣಿಸಿಕೊಂಡಿವೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಏಕಾಏಕಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ನಗರದ ಹಲವ
Letter


ಬೆಂಗಳೂರು, 10 ಮಾರ್ಚ್ (ಹಿ.ಸ.):

ಆ್ಯಂಕರ್:

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಸಂಘರ್ಷ ಪರಿಣಾಮ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೂ ತೀವ್ರ ಪರಿಣಾಮ ಬೀರುವ ಲಕ್ಷಣಗಳು ಕಾಣಿಸಿಕೊಂಡಿವೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಏಕಾಏಕಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ನಗರದ ಹಲವಾರು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ದಟ್ಟವಾಗಿದೆ.

ಎಲ್‌ಪಿಜಿ ಕೊರತೆಯಿಂದಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ, ಉಪಹಾರ ಮತ್ತು ಊಟ ಲಭ್ಯವಾಗುವುದೇ ಅನುಮಾನವಾಗಿದೆ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಇಲ್ಲದೆ ಹೋಟೆಲ್‌ಗಳನ್ನು ನಡೆಸುವುದು ಅಸಾಧ್ಯ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ದೇಶದಲ್ಲಿ 60ರಿಂದ 70 ದಿನಗಳ ಎಲ್‌ಪಿಜಿ ಸಂಗ್ರಹ ಇದೆ ಎಂದು ಈ ಹಿಂದೆ ಹೇಳಿದ್ದರೂ, ವಾಣಿಜ್ಯ ಗ್ಯಾಸ್ ಪೂರೈಕೆ ತಾತ್ಕಾಲಿಕವಾಗಿ ನಿಲ್ಲಿಸಿರುವುದು ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೇಲೆ ಒತ್ತಡ ಹೇರುವ ಮೂಲಕ ಪೂರೈಕೆ ಪುನರಾರಂಭಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರದ ಗಮನಕ್ಕೆ ಸಮಸ್ಯೆಯನ್ನು ತರಲು ಕ್ರಮ ಕೈಗೊಂಡಿದ್ದಾರೆ.

ಕೇಂದ್ರ ಸಚಿವರಿಗೆ ಪತ್ರ

ನಗರದ ಹೋಟೆಲ್‌ಗಳಿಗೆ ಸಿಲಿಂಡರ್ ಅಭಾವ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮನವಿ ಸಲ್ಲಿಸಿದೆ. ಈ ಮನವಿಯ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಕ್ಷೇತ್ರವು ದಿನನಿತ್ಯದ ಅಡುಗೆ ಕಾರ್ಯಗಳಿಗೆ ಬಹುಪಾಲು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ಹೋಟೆಲ್‌ಗಳಿಗೆ ನಿರಂತರವಾಗಿ ಎಲ್‌ಪಿಜಿ ಪೂರೈಕೆ ಖಚಿತಪಡಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಈ ಕುರಿತು ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande