
ಗದಗ, 10 ಮಾರ್ಚ್ (ಹಿ.ಸ.)
ಆ್ಯಂಕರ್:
ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ಲಸಿಕಾಕರಣ ಅಭಿಯಾನ ಕಾರ್ಯಕ್ರಮ ಕುರಿತು ಟಾಸ್ಕ ಫೋರ್ಸ ಸಮಿತಿ ಸಭೆಯು ಜರುಗಿತು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾತನಾಡಿ ಜಿಲ್ಲೆಯ ಯಾವುದೇ ಹೆಣ್ಣು ಮಕ್ಕಳು ಈ ಲಸಿಕೆಯಿಂದ ವಂಚಿತರಾಗಬಾರದು. ಲಸಿಕೆಯ ಬಗ್ಗೆ ಸೂಕ್ತ ಕ್ರೀಯಾ ಯೋಜನೆ ತಯಾರಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚಿಸಿದರು.
ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಮೀನಾಕ್ಷಿ.ಕೆ.ಎಸ್. ಇವರು ಮಾತನಾಡಿ ಎಚ್ ಪಿ ವಿ ಲಸಿಕಾಕರಣ ಕಾರ್ಯಕ್ರಮ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 14 ರಿಂದ 15 ವರ್ಷದ ಎಲ್ಲಾ ಹೆಣ್ಣುಮಕ್ಕಳಿಗೂ ಈ ಲಸಿಕೆಯನ್ನು ನೀಡಲಾಗುತ್ತದೆ. ನಮ್ಮ ಜಿಲ್ಲೆಯಲ್ಲಿ 14 ರಿಂದ 15 ವರ್ಷದ ಹೆಣ್ಣು ಮಕ್ಕಳು ಒಟ್ಟು 11415 ಫಲಾನುಭವಿಗಳಿದ್ದು, ಎಲ್ಲಾ ಫಲಾನುಭವಿಗಳು ಈ ಲಸಿಕೆಯನ್ನು ಪಡೆದು ಗರ್ಭಕಂಠದ ಕ್ಯಾನ್ಸರ್ನಿಂದ ರಕ್ಷಣೆ ಪಡೆಯಬಹುದಾಗಿದೆ ಹಾಗೂ ಶಾಲೆಯಲ್ಲಿ ಪಾಲಕರ ಸಭೆ ಕರೆದು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಳ್ಳಲು ಮನವರಿಕೆ ಮಾಡುವುದು, ಲಸಿಕೆಯ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು, ಲಸಿಕೆಯಿಂದಾಗುವ ಲಾಭಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ ಪಿ ವಿ ಲಸಿಕಾಕರಣ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ ಜಿ, ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಆರೋಗ್ಯ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ ಸರ್ವರಿಗೂ ಸ್ವಾಗತಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP