ಎಲ್ಪಿಜಿ ಸಿಲಿಂಡರ್ ಕೊರತೆ ವಿಚಾರ: ವಿಧಾನಸಭೆಯಲ್ಲಿ ಆಡಳಿತ–ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ
ಬೆಂಗಳೂರು, 11 ಮಾರ್ಚ್ (ಹಿ.ಸ.): ಆ್ಯಂಕರ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಎಲ್‌ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೋಟೆಲ್ ಉದ್ಯಮಗಳು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ತೀವ್
Assembly


ಬೆಂಗಳೂರು, 11 ಮಾರ್ಚ್ (ಹಿ.ಸ.):

ಆ್ಯಂಕರ್:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಎಲ್‌ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೋಟೆಲ್ ಉದ್ಯಮಗಳು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ತೀವ್ರ ಚರ್ಚೆಗೆ ಕಾರಣವಾಯಿತು.

ಶೂನ್ಯವೇಳೆಯಲ್ಲಿ ಸಿಲಿಂಡರ್ ಕೊರತೆ ಕುರಿತು ಚರ್ಚೆಗೆ ಸ್ಪೀಕರ್ ಅವಕಾಶ ನೀಡುತ್ತಿದ್ದಂತೆ ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ಉಂಟಾಗಿ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಸಿಲಿಂಡರ್ ಕೊರತೆ ವಿಷಯವನ್ನು ಕುಣಿಗಲ್ ಶಾಸಕ ಡಾ. ರಂಗನಾಥ್ ಪ್ರಸ್ತಾಪಿಸಿ ಸಮಸ್ಯೆ ತಕ್ಷಣ ಪರಿಹರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು. ಈ ಕುರಿತು ಉತ್ತರ ನೀಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಇರಾನ್–ಇಸ್ರೇಲ್ ನಡುವಿನ ಯುದ್ಧದಿಂದ ವಾಣಿಜ್ಯ ಸಿಲಿಂಡರ್ ಪೂರೈಕೆ ವ್ಯತ್ಯಯವಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ಇಲ್ಲ. ಗೃಹ ಬಳಕೆಯ ಸಿಲಿಂಡರ್‌ಗಳನ್ನು ಪ್ರತಿ 25 ದಿನಕ್ಕೊಮ್ಮೆ ನೀಡಲಾಗುತ್ತಿದೆ ಎಂದು ಹೇಳಿದರು. ಜೊತೆಗೆ ಅನಗತ್ಯವಾಗಿ ಹೆಚ್ಚಿನ ಸಿಲಿಂಡರ್‌ಗಳನ್ನು ಸಂಗ್ರಹಿಸಬಾರದು ಎಂದು ಸಲಹೆ ನೀಡಿದರು.

ಸಚಿವರ ಉತ್ತರಕ್ಕೆ ಪ್ರತಿಕ್ರಿಯಿಸಿದ ಡಾ. ರಂಗನಾಥ್, ವಾಣಿಜ್ಯ ಸಿಲಿಂಡರ್‌ಗಾಗಿ ₹2000ಕ್ಕೂ ಹೆಚ್ಚು ಹಣ ನೀಡಿ ಪಡೆಯಬೇಕಾದ ಪರಿಸ್ಥಿತಿ ಬಂದಿದೆ ಎಂದು ಹೇಳಿ ಕೇಂದ್ರ ಸರ್ಕಾರದ ನೀತಿಯನ್ನು ಟೀಕಿಸಿದರು. ಈ ವೇಳೆ ಪ್ರತಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಆರೋಪ ಮಾಡಬಾರದು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಶಾಸಕರೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೇಳೂರು ಗೋಪಾಲಕೃಷ್ಣ ಮಾತನಾಡಿ, ಎಲ್‌ಪಿಜಿ ಸಮಸ್ಯೆ ಪರಿಹರಿಸುವುದು ಯಾರು? ಬಿಜೆಪಿ ಸದಸ್ಯರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಜೊತೆಗೆ ನರೇಂದ್ರ ಮೋದಿ ಅವರ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಸದನದಲ್ಲಿ ಮಾತಿನ ಚಕಮಕಿ ಮತ್ತಷ್ಟು ಹೆಚ್ಚಾಯಿತು.

ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮುನಿಯಪ್ಪ ಅವರು ತೈಲ ಕಂಪನಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಗ್ಯಾಸ್ ಪೂರೈಕೆ ಮಾಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದೇ ಆಗಿದ್ದು, ಅವರ ಹೇಳಿಕೆಗೆ ಅವಕಾಶ ನೀಡಬೇಕು ಎಂದು ಹೇಳಿದರು. ಆದರೆ ಈ ಮಾತುಗಳೇ ಆಡಳಿತ ಮತ್ತು ಪ್ರತಿಪಕ್ಷ ನಾಯಕರ ನಡುವೆ ಮತ್ತಷ್ಟು ವಾಗ್ವಾದಕ್ಕೆ ಕಾರಣವಾಯಿತು.

ಪ್ರತಿಪಕ್ಷ ನಾಯಕ ಆರ್. ಅಶೋಕ್, ವಾಣಿಜ್ಯ ಸಿಲಿಂಡರ್ ಸರಬರಾಜು ಆಗದಿದ್ದರೆ ಚಳವಳಿ ನಡೆಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಆಕ್ಷೇಪಿಸಿದರು. ಆದರೆ ತಾವು ಚಳವಳಿ ಮಾಡಲು ಪ್ರಚೋದನೆ ನೀಡಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರೂ, ಮಾಧ್ಯಮಗಳಲ್ಲಿ ಅದೇ ರೀತಿಯ ಹೇಳಿಕೆ ಬಂದಿದೆ ಎಂದು ಅಶೋಕ್ ಪ್ರತಿಕ್ರಿಯಿಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande