
ವಿಜಯಪುರ, 13 ಮಾರ್ಚ್ (ಹಿ.ಸ.)
ಆ್ಯಂಕರ್ : ಡೀಮ್ಡ್ ಬಿಎಲ್.ಡಿಇ ವಿಶ್ವವಿದ್ಯಾಲಯ ಅಧೀನದ ಕಾನೂನು ವಿದ್ಯಾಲಯ ವತಿಯಿಂದ “ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಕಾನೂನು ವಿಷಯದ ಕುರಿತ ಕಾರ್ಯಾಗಾರವನ್ನು ಇಂದು ಆಯೋಜಿಸಲಾಗಿದ್ದು, ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಕಾನೂನು ಅರಿವು ಮೂಡಿಸಲಾಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಗಣ್ಯರು, ವೈದ್ಯಕೀಯ ಕ್ಷೇತ್ರದಲ್ಲಿ ಉಂಟಾಗುವ ನಿರ್ಲಕ್ಷ್ಯ ಪ್ರಕರಣಗಳು ಸಮಾಜದಲ್ಲಿ ಹೆಚ್ಚಾಗಿ ಚರ್ಚೆಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಅದರ ಬಗ್ಗೆ ಸಮಗ್ರ ಕಾನೂನು ಅರಿವು ಇರಬೇಕು ಎಂದು ಹೇಳಿದರು.
ಇಂತಹ ಪ್ರಕರಣಗಳನ್ನು ತನಿಖೆ ಮಾಡುವಾಗ ಸೂಕ್ತ ಕಾನೂನು ಕ್ರಮಗಳನ್ನು ಅನುಸರಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಾಗಾರದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕಾನೂನು ವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು 115 ಮಂದಿ ಭಾಗವಹಿಸಿದ್ದರು.
ಕಾರ್ಯಾಗಾರದಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಕಾನೂನು ಅಂಶಗಳು, ಪ್ರಕರಣಗಳ ತನಿಖಾ ವಿಧಾನ, ನ್ಯಾಯಾಲಯದ ತೀರ್ಪುಗಳು ಹಾಗೂ ತನಿಖೆಯಲ್ಲಿ ಪಾಲಿಸಬೇಕಾದ ನಿಯಮಗಳು ಕುರಿತು ತಜ್ಞರು ವಿವರವಾಗಿ ಉಪನ್ಯಾಸ ನೀಡಿದರು.
ಪಾಲ್ಗೊಂಡ ಅಧಿಕಾರಿಗಳು ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ವಿವಿಧ ಉದಾಹರಣೆಗಳನ್ನು ಆಧರಿಸಿ ಚರ್ಚೆ ನಡೆಸಿದರು.
ಈ ಕಾರ್ಯಾಗಾರವು ಪೊಲೀಸ್ ಅಧಿಕಾರಿಗಳಿಗೆ ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಸಹಾಯಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕರು, ಕಾನೂನು ತಜ್ಞರು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande