
ಗದಗ, 13 ಮಾರ್ಚ್ (ಹಿ.ಸ.)
ಆ್ಯಂಕರ್: ಗದಗ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸೀಮಯ್ಯ ಜಯಂತಿ ಕುರಿತು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆಯು ಜರುಗಿತು.
ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಮಾರ್ಚ್ 23 ರಂದು ಬೆಟಗೇರಿಯ ದೇವರ ದಾಸೀಮಯ್ಯ ವೃತ್ತದಲ್ಲಿ ವ್ಯವಸ್ಥಿತವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್ ಅವರು ಮಾತನಾಡಿ ಶ್ರೀ ದೇವರ ದಾಸೀಮಯ್ಯ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಆಚರಿಸಲು ಕ್ರಮ ವಹಿಸಬೇಕು. ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪದವಿಯಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ, ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ, ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನಡೆಸುವ ಕಾರ್ಯಕ್ರಮ ಜರುಗಲಿದೆ.
ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಶ್ರೀ ದೇವರ ದಾಸಿಮಯ್ಯ ಜಯಂತಿ ಕುರಿತು ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ ಎಂದರು.
ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಬ್ಯಾನರ್ ಅಳವಡಿಕೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಸಮಾಜದ ಹಿರಿಯರು, ಗಣ್ಯರು, ಮುಖಂಡರು, ತಹಶೀಲ್ದಾರರಾದ ಶ್ರೀನಿವಾಸಮೂರ್ತಿ ಕುಲಕರ್ಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವ್ಹಿ. ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP