
ಬೆಂಗಳೂರು, 14 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಉಂಟಾಗಿರುವ ಅಡಿಗೆ ಅನಿಲ (ಎಲ್‌ಪಿಜಿ) ಅಭಾವದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
ಬೆಂಗಳೂರು ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಯುದ್ಧದಂತಹ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಮಸ್ಯೆ ಪರಿಹರಿಸುವತ್ತ ಗಮನ ಹರಿಸಬೇಕು ಎಂದು ಹೇಳಿದರು. ಯುದ್ಧದ ಪರಿಣಾಮದಿಂದಲೇ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಈ ವಿಷಯದಲ್ಲಿ ಸಮಂಜಸವಾಗಿ ಮಾತನಾಡುತ್ತಿದ್ದಾರೆ. ಅವರು ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದ ಅನುಭವ ಹೊಂದಿದ್ದು ಪರಿಸ್ಥಿತಿಯ ಕುರಿತು ಅವರಿಗೆ ತಿಳಿದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದರ ಸಂಪೂರ್ಣ ಅರಿವು ಇಲ್ಲದಂತಾಗಿದೆ ಎಂದು ಟೀಕಿಸಿದರು.
ಗ್ಯಾಸ್ ಅಭಾವದ ವಿಚಾರದಲ್ಲಿ ಮುಖ್ಯಮಂತ್ರಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಕಾಳಸಂತೆಯಲ್ಲಿ ಗ್ಯಾಸ್ ಮಾರಾಟವಾಗುತ್ತಿರುವುದನ್ನು ತಡೆಯಬೇಕು. ಕೇಂದ್ರ ಸರ್ಕಾರ ಈಗಾಗಲೇ ಅಗತ್ಯ ಸೇವೆಗಳ ಕಾಯ್ದೆ (ಎಸ್ಮಾ) ಜಾರಿಗೊಳಿಸಿದೆ. ಅಕ್ರಮ ಮಾರಾಟದ ವಿರುದ್ಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಮಯದಲ್ಲಿ ರಾಜಕೀಯವನ್ನು ಬಿಟ್ಟು ರಾಜ್ಯದ ಜನರಿಗೆ ಸಹಕಾರ ನೀಡಬೇಕು. ಯುದ್ಧದಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದು ಅವರು ಹೇಳಿದರು. ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡುವುದನ್ನು ಬಿಟ್ಟು ಕಾಳಸಂತೆಯಲ್ಲಿ ನಡೆಯುತ್ತಿರುವ ಗ್ಯಾಸ್ ಮಾರಾಟವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa