
ಹುಬ್ಬಳ್ಳಿ, 17 ಮಾರ್ಚ್ (ಹಿ.ಸ.):
ಆ್ಯಂಕರ್:ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ತೀವ್ರ ಪ್ರತಿಭಟನೆ ನಡೆಯಿತು. ಈ ಹಿನ್ನಲೆಯಲ್ಲಿ ರೈಲ್ವೆ ಇಲಾಖೆ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಿದೆ.
ನಗರದ ಕೇಶ್ವಾಪುರದ ಕ್ಲಬ್ ರೋಡ್‌ನಲ್ಲಿ ಇರುವ ಪರೀಕ್ಷಾ ಕೇಂದ್ರದ ಬಳಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ ಬಣದ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ನೈರುತ್ಯ ರೈಲ್ವೆ ವತಿಯಿಂದ ಗೂಡ್ಸ್ ರೈಲು ಮ್ಯಾನೇಜರ್ ಹಾಗೂ ಎಲ್‌ಡಿಸಿಇ ಹುದ್ದೆಗಳಿಗೆ ನಡೆಸಲಾಗುತ್ತಿದ್ದ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ ತೀವ್ರಗೊಂಡಿತು.
ಪ್ರತಿಭಟನಾಕಾರರು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು, ಇಲ್ಲವಾದಲ್ಲಿ ಪರೀಕ್ಷೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ತೀವ್ರತೆಯನ್ನು ಗಮನಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು, ಇಂದು ನಡೆಯುತ್ತಿದ್ದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದರು. ಆರ್‌ಸಿಸಿ ಚೇರ್ಮನ್ ಆಸೀಫ್ ಅನ್ಸಾರಿ ಪರೀಕ್ಷೆ ಮುಂದೂಡಿಕೆಯನ್ನು ಘೋಷಿಸಿದರು.
ಪರೀಕ್ಷೆಗೆ ಆಗಮಿಸಿದ್ದ ಅಭ್ಯರ್ಥಿಗಳನ್ನು ಸಿಬ್ಬಂದಿ ವಾಪಸ್ ಕಳುಹಿಸಿದ್ದು. ಮುಂದಿನ ಪರೀಕ್ಷಾ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa