
ಬೆಂಗಳೂರು, 18 ಮಾರ್ಚ್ (ಹಿ.ಸ.):
ಆ್ಯಂಕರ್:
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳಲ್ಲಿ 30 ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿರುವುದು ಆತಂಕಕಾರಿ ಬೆಳವಣಿಗೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯಂತಹ ಅಮಾನವೀಯ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ಇಂತಹ ದಂಧೆಗಳು ಮುಂದುವರಿದರೆ ಸಮಾಜದ ಲಿಂಗ ಸಮತೋಲನ ಹಾಗೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಅಪಾಯವಿದೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಈ ವಿಷಯವನ್ನು ಅಗತ್ಯ ಗಂಭೀರತೆಯಿಂದ ಪರಿಗಣಿಸಿಲ್ಲ ಎಂದು ಅವರು ಆರೋಪಿಸಿದ್ದು, ಹಲವು ಬಾರಿ ಎಚ್ಚರಿಕೆ ನೀಡಿದರೂ ಸರ್ಕಾರ ಸ್ಪಂದಿಸದಿರುವುದು ದುರ್ಭಾಗ್ಯಕರ ಎಂದು ಟೀಕಿಸಿದರು.
ಹೆಣ್ಣು ಮಕ್ಕಳನ್ನು ಹುಟ್ಟುವ ಮುನ್ನವೇ ಕೊಲ್ಲುವ ಈ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಹೆಣ್ಣು ಕಂದಮ್ಮಗಳ ಸುರಕ್ಷತೆ ಪ್ರಶ್ನಾರ್ಥಕವಾಗುವ ಸ್ಥಿತಿ ಉಂಟಾಗಬಹುದು ಎಂದು ಅಶೋಕ ಹೇಳಿದರು.
ಈ ಹಿನ್ನೆಲೆಯಲ್ಲಿ, ಸರ್ಕಾರ ತಕ್ಷಣವೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಇಂತಹ ಪ್ರಕರಣಗಳನ್ನು ಸಂಪೂರ್ಣವಾಗಿ ನಿಗ್ರಹಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa