
ಬಾಗಲಕೋಟೆ, 20 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿದ ಸಾಮಾನ್ಯ ವೀಕ್ಷಕಿ ಪಾರುಲ್ ಪಟವಾರಿ ಅವರು ಇಂದು ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭದ್ರತಾ ಕೊಠಡಿಗೆ ಭೇಟಿ ನೀಡಿದ ಅವರು, ಇವಿಎಂ ಯಂತ್ರಗಳ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಿಸಿಟಿವಿ ವ್ಯವಸ್ಥೆ, ಭದ್ರತಾ ಸಿಬ್ಬಂದಿ ನಿಯೋಜನೆ ಹಾಗೂ ಪ್ರವೇಶ ನಿಯಂತ್ರಣ ಕ್ರಮಗಳು ಸಮರ್ಪಕವಾಗಿ ಜಾರಿಯಾಗುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಮತ ಎಣಿಕೆ ದಿನದ ವ್ಯವಸ್ಥೆಗಳ ಕುರಿತು ಚರ್ಚಿಸಿದ ವೀಕ್ಷಕಿ, ಮತ ಎಣಿಕೆ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ನಡೆಯುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಭೇಟಿ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಅವರು ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಸುಗಮ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇದೇ ವೇಳೆ ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾದ ಮಾಸ್ಟರಿಂಗ್ ಮತ್ತು ಡಿಮಾಸ್ಟರಿಂಗ್ ಕೇಂದ್ರಕ್ಕೂ ಭೇಟಿ ನೀಡಿ ವೀಕ್ಷಕಿ ಪರಿಶೀಲನೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande