ಬಜೆಟ್ ವಿರುದ್ಧ ಕಟ್ಟಡ ಕಾರ್ಮಿಕರ ಕಿಡಿ
ಬೆಂಗಳೂರು, 23 ಮಾರ್ಚ್ (ಹಿ.ಸ.): ಆ್ಯಂಕರ್:ರಾಜ್ಯ ಸರ್ಕಾರದ 2026-27ರ ಬಜೆಟ್‌ನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಶ್ರಮಿಕ ವಸತಿ ಶಾಲೆ ಹಾಗೂ ಕೌಶಲ್ಯ ತರಬೇತಿ ಕೇಂದ್ರಗಳಿಗೆ ಬಳಸುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನ
Citu


ಬೆಂಗಳೂರು, 23 ಮಾರ್ಚ್ (ಹಿ.ಸ.):

ಆ್ಯಂಕರ್:ರಾಜ್ಯ ಸರ್ಕಾರದ 2026-27ರ ಬಜೆಟ್‌ನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಶ್ರಮಿಕ ವಸತಿ ಶಾಲೆ ಹಾಗೂ ಕೌಶಲ್ಯ ತರಬೇತಿ ಕೇಂದ್ರಗಳಿಗೆ ಬಳಸುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ರಾಜ್ಯಾದ್ಯಂತ ಕಾರ್ಮಿಕರು ಸ್ಪೀಕರ್, ಸಚಿವರು ಮತ್ತು ಶಾಸಕರಿಗೆ ಮನವಿ ಸಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 6ರಂದು ಮಂಡನೆಯಾದ ಬಜೆಟ್‌ನಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು ಬೇರೆ ಉದ್ದೇಶಗಳಿಗೆ ತಿರುಗಿಸುವುದನ್ನು ತಕ್ಷಣ ಕೈಬಿಡಬೇಕು ಎಂದು ಫೆಡರೇಶನ್ ಆಗ್ರಹಿಸಿದೆ. ಜೊತೆಗೆ ಹೊಸ ಲೇಬರ್ ಕೋಡ್‌ಗಳಿಂದ ನಿರ್ಮಾಣ ಕಾರ್ಮಿಕರ ಬದುಕಿನ ಮೇಲೆ ಬೀರುವ ದುಷ್ಪರಿಣಾಮಗಳನ್ನು ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಫೆಡರೇಶನ್ ನೇತೃತ್ವದಲ್ಲಿ ನಡೆದ ಈ ಅಭಿಯಾನದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸೇರಿದಂತೆ ಹಲವಾರು ಸಚಿವರು ಹಾಗೂ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಸಚಿವರಾದ ಎಚ್. ಮಹಾದೇವಪ್ಪ, ಶರಣಪ್ರಕಾಶ ಪಾಟೀಲ್, ಮಂಕಾಳು ಎಸ್. ವೈದ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳು ಈ ವಿಚಾರವನ್ನು ವಿಧಾನಸಭೆಯಲ್ಲಿ ಎತ್ತಿ ಸರ್ಕಾರದ ಮೇಲೆ ಒತ್ತಡ ತರಲು ಭರವಸೆ ನೀಡಿದ್ದಾರೆ.

ಈಗಾಗಲೇ 30ಕ್ಕೂ ಅಧಿಕ ಶಾಸಕರಿಗೆ ಮನವಿ ಸಲ್ಲಿಸಿರುವ ಕಾರ್ಮಿಕರು, ಕಲ್ಯಾಣ ನಿಧಿಯ ದುರ್ಬಳಕೆ ಮತ್ತು ಲೇಬರ್ ಕೋಡ್‌ಗಳ ಪರಿಣಾಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮನವಿ ಸ್ವೀಕರಿಸಿದ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಪ್ರಶ್ನೆ ಎತ್ತಿ ಕಾರ್ಮಿಕರ ಬೇಡಿಕೆಗಳಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

ಇದೇ ವೇಳೆ, ಸರ್ಕಾರ ಸೂಕ್ತ ಪ್ರತಿಕ್ರಿಯೆ ನೀಡದಿದ್ದರೆ ಏಪ್ರಿಲ್ 20ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಕಾರ್ಮಿಕರೊಂದಿಗೆ ಅನಿರ್ದಿಷ್ಟ ಧರಣಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಫೆಡರೇಶನ್ ಎಚ್ಚರಿಕೆ ನೀಡಿದೆ.

ಮಾರ್ಚ್ 21-22ರಂದು ನಡೆದ ಮನವಿ ಸಲ್ಲಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲ ಘಟಕಗಳು, ನಾಯಕರು ಮತ್ತು ಸ್ಪಂದಿಸಿದ ಜನಪ್ರತಿನಿಧಿಗಳಿಗೆ ಫೆಡರೇಶನ್ ಕೃತಜ್ಞತೆಗಳನ್ನು ಸಲ್ಲಿಸಿದೆ.

ಈ ಮಾಹಿತಿಯನ್ನು ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande