
ವಿಜಯಪುರ, 26 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗದ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ವಿಜಯಪುರ ಜಿಲ್ಲೆಯ ಪೊಲೀಸರಿಗೆ ಮಹತ್ವದ ಯಶಸ್ಸು ಲಭಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ತನಿಖೆಗೆ ನಿಯೋಜಿಸಲಾದ ವಿಶೇಷ ಪೊಲೀಸ್ ತಂಡ ನಿರಂತರ ಕಾರ್ಯಾಚರಣೆ ನಡೆಸಿ, ಒಟ್ಟು 20 ವಿವಿಧ ಸ್ವತ್ತಿನ ಪ್ರಕರಣಗಳನ್ನು ಭೇದಿಸಿದ್ದು, ಈ ಪ್ರಕರಣಗಳ ಸಂಬಂಧ 42 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು ₹1,20,04,750 ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ಸೇರಿದಂತೆ ವಿವಿಧ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ವಶಪಡಿಸಿಕೊಂಡ ವಸ್ತುಗಳಲ್ಲಿ ಜೆಸಿಬಿ ಯಂತ್ರ, ಪೀಕಪ್ ವಾಹನ, ಸ್ಕಾರ್ಪಿಯೋ ಕಾರು, ಟ್ರ್ಯಾಕ್ಟರ್ಗಳು ಹಾಗೂ ನೀರಿನ ಪಂಪ್ಸೆಟ್ಗಳು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಪತ್ತೆ ಹಾಗೂ ಕಳುವಾದ ವಸ್ತುಗಳ ವಶಕ್ಕೆ ಸಂಬಂಧಿಸಿದಂತೆ ವಿವರವಾದ ಮಾಹಿತಿ ನೀಡಿದ ಅವರು, ಕಳ್ಳತನ ಪ್ರಕರಣಗಳ ಪತ್ತೆಗೆ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಅವರು ಪ್ರಶಂಸಿಸಿದರು.
ವಿಜಯಪುರ ಪೊಲೀಸರ ಕಾರ್ಯವೈಖರಿಗೆ ಸಾರ್ವಜನಿಕರಲ್ಲಿ ವಿಶ್ವಾಸ ಹೆಚ್ಚಾಗಿದ್ದು, ಜಿಲ್ಲೆಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande