
ನವದೆಹಲಿ, 29 ಮಾರ್ಚ್ (ಹಿ.ಸ.):
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಡೆದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಜಾಗತಿಕ ಸಂಘರ್ಷದ ನಡುವೆಯೇ ಉಂಟಾಗಿರುವ ಇಂಧನ ಬಿಕ್ಕಟ್ಟಿನ ಬಗ್ಗೆ ಮಹತ್ವದ ಸಂದೇಶ ನೀಡಿದರು. ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನೇ ನಂಬುವಂತೆ ಅವರು ದೇಶವಾಸಿಗಳಿಗೆ ಮನವಿ ಮಾಡಿದರು.
‘ಮನ್ ಕಿ ಬಾತ್’ ಕಾರ್ಯಕ್ರಮದ 132ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷಗಳು ಜಾಗತಿಕ ಇಂಧನ ಪೂರೈಕೆಗೆ ಪರಿಣಾಮ ಬೀರುತ್ತಿವೆ ಎಂದು ಹೇಳಿದರು. ಇದರ ಪರಿಣಾಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯತೆಯ ಮೇಲೆ ಒತ್ತಡ ಕಂಡುಬರುತ್ತಿದೆ ಎಂದು ಅವರು ತಿಳಿಸಿದರು.
ಇಂತಹ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಬಹುದು ಎಂದು ಎಚ್ಚರಿಸಿದ ಅವರು, ನಾಗರಿಕರು ಸರ್ಕಾರದ ಅಧಿಕೃತ ಮಾಹಿತಿಯನ್ನೇ ಆಧರಿಸಬೇಕು ಎಂದು ಹೇಳಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಭಾರತ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದ ಮೋದಿ, ಗಲ್ಫ್ ರಾಷ್ಟ್ರಗಳು ನೀಡುತ್ತಿರುವ ಬೆಂಬಲಕ್ಕೂ ಕೃತಜ್ಞತೆ ವ್ಯಕ್ತಪಡಿಸಿದರು. ಅಲ್ಲಿರುವ ಭಾರತೀಯರ ಸುರಕ್ಷತೆಗೂ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಈ ವಿಷಯವನ್ನು ರಾಜಕೀಯಗೊಳಿಸುವುದನ್ನು ವಿರೋಧಿಸಿದ ಪ್ರಧಾನಿ, “ಇದು 1.4 ಶತಕೋಟಿ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ. ಸ್ವಾರ್ಥಪರ ರಾಜಕೀಯಕ್ಕೆ ಇಲ್ಲಿ ಸ್ಥಳವಿಲ್ಲ” ಎಂದು ಸ್ಪಷ್ಟಪಡಿಸಿದರು.
ಕೊನೆಯಲ್ಲಿ, ದೇಶದ ಜನರು ಶಾಂತಿ, ಸಹಕಾರ ಮತ್ತು ಏಕತೆಯನ್ನು ಕಾಪಾಡಿಕೊಂಡರೆ ಯಾವುದೇ ಸವಾಲನ್ನೂ ಎದುರಿಸಬಹುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa