
ಬೆಂಗಳೂರು, 30 ಮಾರ್ಚ್ (ಹಿ.ಸ.):
ಆ್ಯಂಕರ್:
ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಭಾಗವಹಿಸಿ, ಬೆಂಬಲ ಬೆಲೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಿದರು.
ಸಭೆಯಲ್ಲಿ ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಸಲ್ಲಿಸಲಾದ ಕುಸುಬೆ (ಸನ್‌ಫ್ಲವರ್) ಉತ್ಪನ್ನ ಖರೀದಿ ಪ್ರಸ್ತಾವನೆ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ರಾಜ್ಯದ ಮಾರುಕಟ್ಟೆಗಳಲ್ಲಿ ಬೆಲೆ ಕುಸಿತ ಕಂಡುಬಂದಿರುವ ಹಿನ್ನೆಲೆಯಲ್ಲಿ, ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ತಕ್ಷಣ ಅನುಮೋದನೆ ನೀಡುವಂತೆ ಮನವಿ ಮಾಡಲಾಯಿತು.
ಇದೇ ವೇಳೆ, ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಲಿರುವ ತೊಗರಿ ಖರೀದಿ ಅವಧಿಯನ್ನು ಏಪ್ರಿಲ್ 1ರಿಂದ 15ರವರೆಗೆ ವಿಸ್ತರಿಸುವಂತೆ ಮನವಿ ಮಾಡಲಾಯಿತು. ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ವಿಸ್ತರಣೆ ಅಗತ್ಯವೆಂದು ರಾಜ್ಯ ಸರ್ಕಾರ ಒತ್ತಾಯಿಸಿದೆ.
ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಖರೀದಿಸಲಾದ ಮಾವು ಉತ್ಪನ್ನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ₹22.71 ಕೋಟಿ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೂಡ ಮನವಿ ಮಾಡಲಾಯಿತು.
ರಾಜ್ಯದ ಎಲ್ಲಾ ಬೇಡಿಕೆಗಳಿಗೆ ಶಿವರಾಜ್ ಸಿಂಗ್ ಚೌಹಾಣ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಕ್ರಮ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa