
ಬಾಗಲಕೋಟೆ, 31 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬಾಗಲಕೋಟೆಯಲ್ಲಿ ಪ್ರಚಾರ ನಡೆಸಿದರು.
ದಿನದಿಂದ ದಿನಕ್ಕೆ
ಬಿರುಸುಗೊಳ್ಳುತ್ತಿರುವ ಚುನಾವಣಾ ಪ್ರಚಾರದಲ್ಲಿ ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೊಡಗಿದ್ದರೆ ಇತ್ತ ವಿಜಯೇಂದ್ರ ಪ್ರಚಾರ ನಡೆಸುತ್ತಿದ್ದಾರೆ.
ಇಂದು ಅವರು ಕ್ಷೇತ್ರದ ವಿವಿಧ ಭಾಗಗಳಲ್ಲಿ ಪಕ್ಷದ ನಾಯಕರೊಂದಿಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಬಾಗಲಕೋಟೆಯ ಜಯನಗರ ಹಾಗೂ ವಿದ್ಯಾಗಿರಿಯ ತೆಗ್ಗಿ ಬಡಾವಣೆಯಲ್ಲಿ ನಡೆದ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ನಾಯಕರು ಸ್ಥಳೀಯ ನಿವಾಸಿಗಳನ್ನು ಭೇಟಿ ಮಾಡಿ ಪಕ್ಷದ ಸಾಧನೆಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ವೇಳೆ ಕ್ಷೇತ್ರದ ಜನರು ಪಕ್ಷದ ಮೇಲೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ಅವರು, “ಈ ಬಾರಿ ಕಮಲ ಅರಳುವುದು ನಿಶ್ಚಿತ. ಅಭಿವೃದ್ಧಿಯೇ ಗೆಲ್ಲಲಿದೆ. ಕ್ಷೇತ್ರದ ಜನರು ಅಭಿವೃದ್ಧಿ ಪರವಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿರುವುದು ಪಕ್ಷದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದರು.
ಪ್ರಚಾರದಲ್ಲಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕರಾದ ಜಗದೀಶ್ ಗುಡಗಂಟಿ, ಶೈಲೇಂದ್ರ ಬೆಲ್ದಾಳೆ, ಪಿ.ಎಚ್. ಪೂಜಾರ, ಹನುಮಂತ ನಿರಾಣಿ ಸೇರಿದಂತೆ ಹಲವು ಪ್ರಮುಖರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande