ನೂತನ ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ
ನೂತನ ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ
ಸಮಗ್ರ ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರ ಭೈರತಿ ಸುರೇಶ್ ನೇಮಕಾತಿ ಪತ್ರಗಳನ್ನು ವಿತರಿಸಿದರು.


ಕೋಲಾರ, ೦೪ ಮಾರ್ಚ್ (ಹಿ.ಸ)

ಆಂಕರ್ : ನೂತನವಾಗಿ ನೇಮಕವಾಗಿರುವ ಒಟ್ಟು ೩೦೦ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಯರು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ೨೦೨೫-೨೬ನೇ ಸಾಲಿನ ನೂತನವಾಗಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು.

ಈ ಬಾರಿಯ ನೇಮಕಾತಿಯು ಯಾವುದೇ ರಾಜಕೀಯ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ಅತ್ಯಂತ ಪಾರದರ್ಶಕವಾಗಿ ನಡೆದಿದೆ ಎಂದು ತಿಳಿಸಿದರು. ಜಿಲ್ಲೆಯಾದ್ಯಂತ ಒಟ್ಟು ೫೯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೨೨೬ ಸಹಾಯಕಿಯರನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಯಾವುದೇ ಮಂತ್ರಿ ಅಥವಾ ಶಾಸಕರ ಶಿಫಾರಸ್ಸು ಇಲ್ಲದೆ, ಅಭ್ಯರ್ಥಿಗಳ ಸಾಮರ್ಥ್ಯ ಮತ್ತು ಅರ್ಹತೆಯನ್ನು ಪರಿಗಣಿಸಿ ಈ ನೇಮಕಾತಿ ಮಾಡಲಾಗಿದ್ದು, ಸರ್ಕಾರದ ಮೇಲೆ ಜನರಿಗಿರುವ ವಿಶ್ವಾಸವನ್ನು ಇದು ಹೆಚ್ಚಿಸಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿಯನ್ನು ನೆನಪಿಸಿದ ಸಚಿವರು, ಗರ್ಭಿಣಿಯರು, ಬಾಣಂತಿಯರು ಮತ್ತು ಪುಟ್ಟ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ನಿಮ್ಮ ಪಾತ್ರ ಹಿರಿದು. ಮಕ್ಕಳ ಭವಿಷ್ಯ ರೂಪಿಸುವ ಮತ್ತು ಆರೋಗ್ಯವಂತ ಸಮಾಜ ನಿರ್ಮಿಸುವ ಈ ಪುಣ್ಯದ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೇಗೆ ಪೂರಕವಾಗಿವೆ ಎಂಬುದನ್ನು ವಿವರಿಸಿದರು. ವಿಶೇಷವಾಗಿ ಗೃಹಜ್ಯೋತಿ ಯೋಜನೆಯಡಿ ಯಾರೂ ವಿದ್ಯುತ್ ಬಿಲ್ ಕಟ್ಟುತ್ತಿಲ್ಲ ಎಂಬುದನ್ನು ನೆನಪಿಸಿ, ಈ ಉಳಿತಾಯದ ಹಣ ಕುಟುಂಬದ ನಿರ್ವಹಣೆಗೆ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದ ಕೊನೆಯಲ್ಲಿ ಸಾಂಕೇತಿಕವಾಗಿ ಕೆಲವು ಅಭ್ಯರ್ಥಿಗಳಿಗೆ ಸಚಿವರು ಮತ್ತು ಗಣ್ಯರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಕೋಲಾರ ಶಾಸಕ ಡಾ. ಕೊತ್ತೂರು ಜಿ. ಮಂಜುನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಬಂಗಾರಪೇಟೆ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳಾ, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande