ಬಜೆಟ್:‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆ ಜಾರಿ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯದ ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಕೃಷಿ ಕ್ಷೇತ್ರವನ್ನು ಸುಸ್ಥಿರಗೊಳಿಸುವ ಉದ್ದೇಶದಿಂದ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಉತ್ಪಾದನೋತ್ತರ
Cm


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯದ ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಕೃಷಿ ಕ್ಷೇತ್ರವನ್ನು ಸುಸ್ಥಿರಗೊಳಿಸುವ ಉದ್ದೇಶದಿಂದ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಉತ್ಪಾದನೋತ್ತರ ಕೃಷಿ ಚಟುವಟಿಕೆಗಳನ್ನು ಬಲಪಡಿಸಲು ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ₹100 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಯೋಜನೆಯಡಿ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಮೌಲ್ಯ ಸರಪಳಿ ಅಭಿವೃದ್ಧಿ, ಕೃಷಿ ತ್ಯಾಜ್ಯಗಳ ಮರುಬಳಕೆ ಹಾಗೂ ಮಾರುಕಟ್ಟೆ ಸಂಪರ್ಕಗಳನ್ನು ಸಮಗ್ರವಾಗಿ ಬಲಪಡಿಸುವ ಮೂಲಕ ಗ್ರಾಮೀಣ ರೈತರಿಗೆ ಸ್ಥಿರ ಹಾಗೂ ಹೆಚ್ಚುವರಿ ಆದಾಯದ ಮೂಲಗಳನ್ನು ಸೃಷ್ಟಿಸಲು ಸರ್ಕಾರ ಉದ್ದೇಶಿಸಿದೆ.

ರಾಜ್ಯದಲ್ಲಿ ಸಿರಿಧಾನ್ಯ ಹಾಗೂ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ‘ಮಿಲೆಟ್ ಹಬ್’ ಅನ್ನು ರೈತರು, ಗ್ರಾಮೀಣ ಯುವಕರು ಮತ್ತು ನವ ಉದ್ಯಮಿಗಳಿಗೆ ತಾಂತ್ರಿಕ ನೆರವು, ಸಂಸ್ಕರಣಾ ಸೌಲಭ್ಯ, ಗುಣಮಟ್ಟ ಪ್ರಮಾಣೀಕರಣ ಹಾಗೂ ಮಾರುಕಟ್ಟೆ ಸಂಪರ್ಕಗಳನ್ನು ಒಂದೇ ಸೂರಿನಡಿ ಒದಗಿಸುವ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಸ್ವಾವಲಂಬಿ ಸಂಸ್ಥೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರೈತರಿಗೆ ಮಣ್ಣು, ನೀರು, ಬೀಜ ಮತ್ತು ರಸಗೊಬ್ಬರಗಳ ಪರೀಕ್ಷೆಗಳಲ್ಲಿ ನಿಖರ ಫಲಿತಾಂಶಗಳನ್ನು ಒದಗಿಸುವ ಉದ್ದೇಶದಿಂದ ಕೃಷಿ ಇಲಾಖೆಯ ಎಲ್ಲಾ ಪ್ರಯೋಗಾಲಯಗಳಿಗೆ ಎನ್ಎಬಿಎಲ್ ಮಾನ್ಯತೆ ಪಡೆದು ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಪರೀಕ್ಷಣಾ ಸೇವೆಗಳನ್ನು ನೀಡಲಾಗುವುದು. ಇದರಿಂದ ಕೃಷಿ ಉತ್ಪಾದಕತೆ ಹೆಚ್ಚಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ನೂತನ ದ್ವಿದಳಧಾನ್ಯ ತಳಿಗಳ ಬಿತ್ತನೆ ಬೀಜಗಳ ಬಳಕೆಯನ್ನು ರೈತರಲ್ಲಿ ಉತ್ತೇಜಿಸಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲಾಗುವುದು.

ಮಣ್ಣಿನ ಸಾವಯವ ಇಂಗಾಲ ಮತ್ತು ಅದರ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಪರಿಸರ ಸ್ನೇಹಿ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ‘ವಸುಧಾಮೃತ’ ಕಾರ್ಯಕ್ರಮವನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಘೋಷಿಸಿದರು.

ಬೆಳೆಗಳಲ್ಲಿ ಕೀಟ ಹಾಗೂ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ನಿಯಂತ್ರಿಸಲು ಅಗತ್ಯವಿರುವ ಪರಿಸರ ಸ್ನೇಹಿ ಜೈವಿಕ ಪೀಡೆನಾಶಕ ಮತ್ತು ಜೈವಿಕ ಕೀಟನಾಶಕಗಳ ಬಳಕೆ ಸೇರಿದಂತೆ ಸುರಕ್ಷಿತ ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಸಕಾಲದಲ್ಲಿ ಮಾಹಿತಿ ನೀಡಲು ‘ಸಸ್ಯ ಸಂಜೀವಿನಿ’ ಯೋಜನೆ ಜಾರಿಗೆ ತರಲಾಗುವುದು.

ಇದಲ್ಲದೆ ರೈತರಿಗೆ ಹವಾಮಾನ, ಮಾರುಕಟ್ಟೆ, ಕೃಷಿ ತಾಂತ್ರಿಕತೆ ಹಾಗೂ ಇಲಾಖಾ ಮಾಹಿತಿಯನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಕೃಷಿ ಇಲಾಖೆಯ ‘ರೈತ ಕರೆ ಕೇಂದ್ರ’ವನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಈ ಕ್ರಮಗಳ ಮೂಲಕ ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಮತ್ತಷ್ಟು ಆಧುನೀಕರಿಸಿ ರೈತರ ಆದಾಯ ಹೆಚ್ಚಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande