ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ
ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹನಾಧಿಕಾರಿ ಡಾ. ಪ್ರವೀಣ್ ಬಾಗೇವಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿದರು.


ಕೋಲಾರ, ೦೬ ಮಾರ್ಚ್ (ಹಿ.ಸ)

ಆಂಕರ್ : ಬೇಸಿಗೆ ಮುಂಜಾಗ್ರತೆಯಾಗಿ ಕುಡಿಯುವ ನೀರಿನ ಅಭಾವ ಉಂಟಾಗದAತೆ ಎಚ್ಚರ ವಹಿಸಲು ಹಾಗೂ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಪಿಡಿ ಓ ಮತ್ತು ಆಡಳಿತಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿರುವ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳ ಮಹತ್ವದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ತೆರಿಗೆ ವಸೂಲಾತಿ ಮತ್ತು ಸಾರ್ವಜನಿಕ ಸೇವೆಗಳ ಅನುಷ್ಠಾನದ ಕುರಿತು ಸಮಗ್ರ ಚರ್ಚೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು ೨೪೬ ನ್ಯಾಯಾಲಯ ಪ್ರಕರಣಗಳು ಬಾಕಿ ಇದ್ದು, ಈ ಪೈಕಿ ೧೩೯ ಪ್ರಕರಣಗಳಲ್ಲಿ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಇಒ ಅವರು, ಶೀಘ್ರವಾಗಿ ಅಫಿಡವಿಟ್ ಸಲ್ಲಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೂಚಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು ೧೮,೭೭೧ ನಾಯಿಗಳನ್ನು ಗುರುತಿಸಲಾಗಿದೆ. ನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆ ನಡೆಸಲು ಪ್ರತಿ ತಾಲ್ಲೂಕಿಗೆ ೧೦೦ ಲಕ್ಷ ರೂ.ಗಳಂತೆ ಒಟ್ಟು ೬೦೦ ಲಕ್ಷ ರೂ.ಗಳ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ೧,೨೩೯ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ ೧,೧೦೩ ಘಟಕಗಳು ಸುಸ್ಥಿತಿಯಲ್ಲಿವೆ ಮತ್ತು ೧೩೬ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಘಟಕಗಳನ್ನು ತಕ್ಷಣವೇ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ನೀರು ಪೂರೈಸಲು ಅಧಿಕಾರಿಗಳಿಗೆ ಆದೇಶಿಸಿದರು.

೨೦೨೫-೨೬ನೇ ಸಾಲಿನ ತೆರಿಗೆ ವಸೂಲಾತಿಯಲ್ಲಿ ಜಿಲ್ಲೆಯು ಶೇ. ೭೮.೫೭ ರಷ್ಟು ಸಾಧನೆ ಮಾಡಿದೆ. ಬಂಗಾರಪೇಟೆ ತಾಲ್ಲೂಕು ಶೇ. ೮೩.೨೧ ರಷ್ಟು ಪ್ರಗತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಶ್ರೀನಿವಾಸಪುರ (ಶೇ. ೮೧.೦೪) ಮತ್ತು ಮಾಲೂರು (ಶೇ. ೮೦.೭೫) ನಂತರದ ಸ್ಥಾನಗಳಲ್ಲಿವೆ. ತೆರಿಗೆ ಬಾಕಿ ಇರುವ ಪಂಚಾಯತ್ಗಳು ಮಾರ್ಚ್ ಅಂತ್ಯದೊಳಗೆ ಶೇ. ೧೦೦ ಗುರಿ ತಲುಪಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು ೧,೮೮೭ ಕೆರೆಗಳಿದ್ದು, ಇವುಗಳಲ್ಲಿ ೮೭೯ ಕೆರೆಗಳಲ್ಲಿ ಒತ್ತುವರಿ ಗುರುತಿಸಲಾಗಿದೆ. ಇದುವರೆಗೆ ೭೦೬ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಬಾಕಿ ಇರುವ ೧೭೩ ಕೆರೆಗಳ ಒತ್ತುವರಿಯನ್ನು ಶೀಘ್ರವಾಗಿ ತೆರವುಗೊಳಿಸಲು ಸರ್ವೆ ಕಾರ್ಯ ಚುರುಕುಗೊಳಿಸಲು ಸೂಚಿಸಿದರು.

ಪ್ರಸಕ್ತ ಸಾಲಿನ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸುತ್ತಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ಶೇ. ೩೧.೩೧ ರಷ್ಟು ಆರ್ಥಿಕ ಪ್ರಗತಿಯಾಗಿದೆ. ಕೂಸಿನ ಮನೆ ಮತ್ತು ಶಾಲಾ ಶೌಚಾಲಯಗಳ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ತಿಳಿಸಲಾಯಿತು.

ಸಭೆಯಲ್ಲಿ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಕರ್ತವ್ಯ ಲೋಪ ಎಸಗುವ ಅಥವಾ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಪ್ರವೀಣ್ ಪಿ ಬಾಗೇವಾಡಿ ಅವರು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಯೋಜನಾ ನಿರ್ದೇಶಕ ವೆಂಕಟಾಚಲಪತಿ, ಎಲ್ಲಾ ಪಂಚಾಯತ್ ಆಧಾಳಿತಾಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande