
ಬೆಂಗಳೂರು, 06 ಮಾರ್ಚ್ (ಹಿ.ಸ.):
ಆ್ಯಂಕರ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಕರ್ನಾಟಕದ ಪ್ರಮುಖ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ವೇಗ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಬಹುನಿರೀಕ್ಷಿತ ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ರಾಜ್ಯವು ಸಲ್ಲಿಸಿದ್ದ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿರುವುದು ಕರ್ನಾಟಕಕ್ಕೆ ಮಹತ್ವದ ಕಾನೂನು ಜಯವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿ ಶೀಘ್ರ ಸಿದ್ಧಪಡಿಸಿ, ಅರಣ್ಯ ಭೂ ಬಳಕೆ ಸೇರಿದಂತೆ ಅಗತ್ಯ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು, ಎರಡನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಕಾಲುವೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಜೊತೆಗೆ ಹೆಚ್ಚುವರಿ ನೀರಿನ ಸಂಗ್ರಹಕ್ಕಾಗಿ ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿಎಂಸಿ ಸಾಮರ್ಥ್ಯದ ಸಮತೋಲನಾ ಜಲಾಶಯ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ 5,300 ಕೋಟಿ ರೂ. ಘೋಷಣೆ ಇದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದುವರೆಗೆ 11,343 ಕೋಟಿ ರೂ. ವೆಚ್ಚ ಮಾಡಿದೆ. ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಫೀಡರ್ ಕಾಮಗಾರಿಗಳನ್ನು 2027ರೊಳಗೆ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯುಕೆಪಿ ಮೂರನೇ ಹಂತದ ಯೋಜನೆಯಡಿ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕಾರ್ಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ. ಮುಳುಗಡೆಯಾಗುವ ಖುಷ್ಕಿ ಜಮೀನಿಗೆ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ 40 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ.
ಇದಲ್ಲದೆ ತುಂಗಭದ್ರಾ ಆಣೆಕಟ್ಟೆಯಲ್ಲಿ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಿ ಮುಂಗಾರು ಪೂರ್ವದಲ್ಲೇ ಹೊಸ ಗೇಟುಗಳನ್ನು ಅಳವಡಿಸಲಾಗುವುದು. ಜಲಾಶಯದಲ್ಲಿ ಹೂಳು ಹೆಚ್ಚಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ನವಲಿ ಸಮೀಪ ಸಮತೋಲನಾ ಜಲಾಶಯ ನಿರ್ಮಾಣ ಸೇರಿದಂತೆ ಪರ್ಯಾಯ ಕ್ರಮಗಳನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಿ ಅನುಷ್ಠಾನಗೊಳಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa