
ಕೋಲಾರ: ಮಾರ್ಚ್ ೦೬ (ಹಿ.ಸ)
ಆಂಕರ್ : ಕ್ರೀಡೆ ಆರೋಗ್ಯಕ್ಕೆ ಒಳ್ಳೆಯದು. ಮಹಿಳೆಯರು ವೃತ್ತಿ ಜೀವನ ಮತ್ತು ವೈಯಕ್ತಿಕ ಬದುಕನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಕೆಲಸದ ಒತ್ತಡದಿಂದ ಆಚೆ ಬರಲು ಮಹಿಳೆಯರಿಗಾಗಿ ಇಂತಹ ಕ್ರೀಡಾಕೂಟ ಹಮ್ಮಿಕೊಂಡಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ. ಬಾಗೇವಾಡಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗಾಗಿ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ, ‘ಮಹಿಳಾ ಕ್ರೀಡಾಕೂಟ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ನಡಿಗೆ, ಯೋಗ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕೆಂದರಲ್ಲದೆ ಎಲ್ಲಾ ಮಹಿಳೆಯರಿಗೂ ಮುಂಚಿತವಾಗಿ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಅಥ್ಲೆಟಿಕ್ ಕ್ರೀಡಾಪಟು ಅಮರಾವತಿ.ಎಸ್. ಹಾಗೂ ಕುಸ್ತಿ ಕ್ರೀಡಾಪಟು ಅಂಬಿಕಾ ಹೆಚ್.ಇ ಇವರನ್ನು ಸನ್ಮಾನಿಸಲಾಯಿತು. ಬಿ.ವೆಂಕಟಾಚಲಪತಿ ಮತ್ತು ತಂಡದವರು ನಾಡಗೀತೆ ಹಾಡಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷಿö್ಮ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಡಾ. ಕೆ.ಎನ್.ಕವನ ಮತ್ತಿತರರು ಉಪಸ್ಥಿತರಿದ್ದರು. ನಂತರ ಮಹಿಳೆಯರಿಗಾಗಿ ಪಾಸಿಂಗ್ ದಿ ಬಾಲ್, ಮ್ಯೂಸಿಕಲ್ ಚೇರ್, ೪೦೦ ಮೀ ನಡಿಗೆ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್