
ಮುಂಬಯಿ, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಕಲ್ಯಾಣ–ಅಹಲ್ಯಾ ನಗರ ಹೆದ್ದಾರಿಯ ರಾಯಟೆ ಗ್ರಾಮದ ಸಮೀಪ, ಸಿಮೆಂಟ್ ಮಿಕ್ಸರ್ ವಾಹನವು ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮುರಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಪಿಕಪ್ ವಾಹನವು ಮುರ್ಬಾದ್ನಿಂದ ಕಲ್ಯಾಣ್ ಕಡೆಗೆ ಸಾಗುತ್ತಿತ್ತು. ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ರಾಯಟೆ ಗ್ರಾಮದ ಬಳಿಯ ಹೊಸ ಸೇತುವೆ ಸಮೀಪ ಎದುರಿನಿಂದ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ತಿತ್ವಾಲಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದ್ದು, ಅಪಘಾತದ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ನಡೆಯುತ್ತಿದೆ.
ಗಾಯಗೊಂಡ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa