
ಮಂಡ್ಯ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಲಾದ ಶ್ರೀಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಶ್ರೀಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದ ಬಳಿಕ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಶ್ರೀಗಳು ಪ್ರಧಾನಿಗೆ ತಿಲಕವಿಟ್ಟು ಆಶೀರ್ವದಿಸಿದರು.
ಮಂದಿರ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಅವರು ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಮಂದಿರದ ವಿವಿಧ ಭಾಗಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಆದಿಚುಂಚನಗಿರಿಯಲ್ಲಿ ಡಾ. ಬಾಲಗಂಗಾಧರನಾಥ ಶ್ರೀಗಳ ಅಂತ್ಯಸಂಸ್ಕಾರದ ಸ್ಥಳದಲ್ಲಿರುವ ಮಂಗಳ ಮಂಟಪದ ಮೇಲೆ ಸುಮಾರು 26,250 ಚದರ ಅಡಿ ವಿಸ್ತೀರ್ಣದಲ್ಲಿ ಈ ಭೈರವೈಕ್ಯ ಮಂದಿರ ನಿರ್ಮಾಣಗೊಂಡಿದೆ. ಮಂದಿರ ನಿರ್ಮಾಣಕ್ಕೆ ಅಂದಾಜು ₹80 ಕೋಟಿ ವೆಚ್ಚವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa