
ಚಿತ್ರದುರ್ಗ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಕಲಿ ವಿಕಲಚೇತನ ಪ್ರಮಾಣಪತ್ರ ಪಡೆದು ಸರ್ಕಾರಿ ಸೌಲಭ್ಯಗಳು ಹಾಗೂ ಉದ್ಯೋಗಗಳನ್ನು ಪಡೆಯುವವರ ವಿರುದ್ಧ ಮತ್ತು ಸುಳ್ಳು ಪ್ರಮಾಣಪತ್ರ ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ ಹಾಗೂ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಅರ್ಹರಲ್ಲದವರು ವಿಕಲಚೇತನರ ಮೀಸಲಾತಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.
ಸಂಶಯಾಸ್ಪದ ಪ್ರಕರಣಗಳಲ್ಲಿ ತಜ್ಞ ವೈದ್ಯರ ಸಮಿತಿಯಿಂದ ಮರು ತಪಾಸಣೆ ನಡೆಸಲಾಗುವುದು. ಅಕ್ರಮ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಯುಡಿಐಡಿ ಕಾರ್ಡ್ ಹಾಗೂ ಶ್ರವಣದೋಷ ಪ್ರಮಾಣಪತ್ರ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ವಿಕಲಚೇತನರಿಗೆ ಆಸ್ಪತ್ರೆಗಳಲ್ಲಿ ವಿಶೇಷ ಆದ್ಯತೆ ನೀಡಿ, ತ್ವರಿತವಾಗಿ ತಪಾಸಣೆ ಹಾಗೂ ಪ್ರಮಾಣಪತ್ರ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿಕಲಚೇತನರಿಗಾಗಿ ಮೀಸಲಿರುವ 5% ಅನುದಾನ ಮತ್ತು ಯೋಜನೆಗಳ ವಿವರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸೂಚನೆ ನೀಡಿದರು.
ಕೆಎಸ್ಆರ್ಟಿಸಿ ಬಸ್ ಪಾಸ್ ಅರ್ಜಿಗೆ ಗ್ರಾಮ ಒನ್ ಕೇಂದ್ರಗಳಲ್ಲಿ ನಿಗದಿತ ರೂ.50ಕ್ಕಿಂತ ಹೆಚ್ಚು ಶುಲ್ಕ ವಸೂಲಿಸಿದರೆ ಅಂತಹ ಕೇಂದ್ರಗಳ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಕನ್ನಡ ವಿಷಯದಲ್ಲಿ ಬಿ.ಎಡ್ ಪೂರ್ಣಗೊಳಿಸಿದ ವಿಕಲಚೇತನೆ ಶಶಿಕಲ ಅವರಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಶಿಕ್ಷಕಿ ಹುದ್ದೆಗೆ ಪರಿಗಣಿಸುವುದಾಗಿ ಅಪರ ಜಿಲ್ಲಾಧಿಕಾರಿ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೆ 35,564 ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ವಿತರಿಸಲಾಗಿದ್ದು, ಇನ್ನೂ 2,666 ಅರ್ಜಿಗಳು ವೈದ್ಯಕೀಯ ಮಂಡಳಿಯ ಮುಂದೆ ಬಾಕಿ ಇವೆ ಎಂದು ಜಿಲ್ಲಾ ವಿಕಲಚೇತನಾಧಿಕಾರಿ ಜೆ.ವೈಶಾಲಿ ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa