ಮುಂಗಾರು ಕೊರತೆ ಆತಂಕ ; ಕುಡಿಯುವ ನೀರಿಗೆ ತುರ್ತು ಸಿದ್ಧತೆ ಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ
Cm meeting


ಬೆಂಗಳೂರು, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನ ಸೌಧದಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಕುಡಿಯುವ ನೀರಿನ ಪೂರೈಕೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ಕುಡಿಯುವ ನೀರಿಗೆ ತೊಂದರೆಯಾಗಿದೆಯೆಂದರೆ ಅದರ ಹೊಣೆ ಸಂಬಂಧಿಸಿದ ಜಿಲ್ಲಾಧಿಕಾರಿಗಳ ಮೇಲಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಈ ವರ್ಷ ಆಗಸ್ಟ್ನಲ್ಲಿ ಮಾತ್ರ ವಾಡಿಕೆ ಮಳೆಯಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್ನಲ್ಲಿ ಮಳೆ ಕೊರತೆ ಕಾಣಿಸಬಹುದು. ಏಪ್ರಿಲ್ನಿಂದ ಜೂನ್ವರೆಗೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ ದಿನಗಳ ಪ್ರಮಾಣ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಮುಖ್ಯಮಂತ್ರಿ ಅವರು ಸಾರ್ವಜನಿಕರಿಗೆ ನೆರಳು, ಕುಡಿಯುವ ನೀರು ಮತ್ತು ಬೇಸಿಗೆ ತಾಪಮಾನದಿಂದ ರಕ್ಷಣೆಗಾಗಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಕುಡಿಯುವ ನೀರಿನ ಪೂರೈಕೆಗೆ ಅಗತ್ಯವಿರುವ ಅನುದಾನದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಹೇಳಿ, ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ 213 ತಾಲೂಕುಗಳು ಹಾಗೂ 2,410 ಗ್ರಾಮ ಪಂಚಾಯತಿಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. 137 ಗ್ರಾಮಗಳಿಗೆ 129 ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು 515 ಗ್ರಾಮಗಳಿಗೆ ನೀರು ಒದಗಿಸಲಾಗುತ್ತಿದೆ.

ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಮಂಡ್ಯ, ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವಾರು ಗ್ರಾಮ ಪಂಚಾಯತಿಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದೆಂದು ಸಭೆಯಲ್ಲಿ ತಿಳಿಸಲಾಯಿತು.

ನಗರ ಪ್ರದೇಶಗಳಲ್ಲೂ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇದೆ. ಇನ್ನೂ 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. 145 ವಾರ್ಡ್ಗಳಿಗೆ 57 ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, 22 ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ.

ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಬೇಕು. ಮೊದಲು ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯುವ ಕ್ರಮಕ್ಕೆ ಆದ್ಯತೆ ನೀಡಬೇಕು. ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿ ಕೊರೆಯಬಹುದಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿಎಂಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿಎಂಸಿ ನೀರು ಲಭ್ಯವಿತ್ತು. ಕುಡಿಯುವ ನೀರಿನ ದೃಷ್ಟಿಯಿಂದ ಜುಲೈ ಮಧ್ಯಭಾಗದವರೆಗೂ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ನೀರಾವರಿಗಿಂತ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರು ಸೋರಿಕೆಯಾಗುತ್ತಿರುವ ಸ್ಥಳಗಳನ್ನು ಗುರುತಿಸಿ ತಕ್ಷಣ ದುರಸ್ತಿ ಕೈಗೊಳ್ಳಬೇಕು ಎಂದರು. ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿ, ಸಾರ್ವಜನಿಕರ ಕುಡಿಯುವ ನೀರಿನ ಅಹವಾಲುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಿದರು.

ಎಲ್ಲಾ ಆರ್.ಒ. ಘಟಕಗಳು ನಿರಂತರ ವಿದ್ಯುತ್ ಪೂರೈಕೆಯೊಂದಿಗೆ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವಲ್ಲಿ ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಇದೇ ವೇಳೆ, ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ಮುಖ್ಯಮಂತ್ರಿ, ವ್ಯಾಪಾರಿಗಳು ಅತಿಯಾಗಿ ರಸಗೊಬ್ಬರ ಖರೀದಿಸಿ ದಾಸ್ತಾನು ಮಾಡುವುದನ್ನು ತಡೆಯಬೇಕು ಎಂದು ಸೂಚಿಸಿದರು. ಯೂರಿಯಾ ಮತ್ತು ಡಿಎಪಿ ಗೊಬ್ಬರ ಸರಿಯಾಗಿ ವಿತರಣೆ ಆಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ಗೊಬ್ಬರ ಸಾಗಾಟವಾಗದಂತೆ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದರು.

ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಗೊಬ್ಬರ ಮಾರಾಟವಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಅರ್ಹ ರೈತರಿಗೆ ಗೊಬ್ಬರ ಕೊರತೆಯಾಗದಂತೆ ನಿರಂತರ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಕಲುಷಿತ ನೀರು ಪೂರೈಕೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರಿನಿಂದ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande