ಅಲ್ಪಸಂಖ್ಯಾತರ ಸಬಲೀಕರಣದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಜಿಲ್ಲಾಧಿಕಾರಿಗಳ ಕರೆ
ಅಲ್ಪಸಂಖ್ಯಾತರ ಸಬಲೀಕರಣದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಜಿಲ್ಲಾಧಿಕಾರಿಗಳ ಕರೆ
ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ರವರು ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮದ ಪರಿಶೀಲನೆ ನಡೆಸಿದರು.


ಕೋಲಾರ ೧೭ ಏಪ್ರಿಲ್ (ಹಿ.ಸ) :

ಆ್ಯಂಕರ್ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ಯೋಜನೆಗಳು ಕೇವಲ ಕಡತಕ್ಕೆ ಸೀಮಿತವಾಗದೆ, ಜನಸಾಮಾನ್ಯರಿಗೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಬಲ ನೀಡುವ ಉದ್ದೇಶದಿಂದ ಹೊಸದಾಗಿ 'ವಕ್ಫ್ ಮಹಿಳಾ ಪಿಯು ಕಾಲೇಜು' ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಟ್ಟಡದ ಲಭ್ಯತೆ ಇಲ್ಲ ಎಂಬ ನೆಪವೊಡ್ಡಿ ಶಿಕ್ಷಣವನ್ನು ಮುಂದೂಡಬಾರದು. ಸ್ವಂತ ಕಟ್ಟಡ ಸಿದ್ಧವಾಗುವವರೆಗೆ ನಗರಸಭೆಯ ಸಮುದಾಯ ಭವನ ಅಥವಾ ಸುಸಜ್ಜಿತ ಖಾಸಗಿ ಕಟ್ಟಡವನ್ನಾದರೂ ಬಾಡಿಗೆಗೆ ಪಡೆದು ತಕ್ಷಣವೇ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಿ ಎಂದು ಜಿಲ್ಲಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಗಡುವು ನೀಡಿದರು.

ಗಾಜಲದಿನ್ನೆಯ ಮೊರಾರ್ಜಿ ದೇಸಾಯಿ ಮಾದರಿಯ ಸಿಬಿಎಸ್ಇ ಶಾಲೆಯು ಸತತವಾಗಿ ಶೇ. ೧೦೦ರಷ್ಟು ಫಲಿತಾಂಶ ದಾಖಲಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಇತರ ಶಾಲೆಗಳು ಇವುಗಳನ್ನು ಮಾದರಿಯಾಗಿಟ್ಟುಕೊಳ್ಳಬೇಕು ಎಂದರು. ಈ ಸಾಧನೆ ಮಾಡಿದ ಶಿಕ್ಷಕರನ್ನು ಹಾಗೂ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಅಧಿಕೃತವಾಗಿ ಸನ್ಮಾನಿಸಿ ಗೌರವಿಸಲು ನಿರ್ದೇಶಿಸಿದರು.

ಬಂಗಾರಪೇಟೆ ಹಾಗೂ ಕೆಜಿಎಫ್ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. ಮಳೆಗಾಲ ಆರಂಭವಾಗುವ ಮೊದಲೇ ಕಟ್ಟಡಗಳ ಒಳಾಂಗಣ ಕೆಲಸಗಳನ್ನು ಪೂರ್ಣಗೊಳಿಸಿ, ಪೀಠೋಪಕರಣ ಸೇರಿದಂತೆ ಅಗತ್ಯ ಸೌಲಭ್ಯಗಳೊಂದಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭಿಸುವAತೆ ಎಂಜಿನಿಯರಿ0ಗ್ ವಿಭಾಗಕ್ಕೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿ ನಡೆಯುತ್ತಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಲು ಬಿಇಒಗಳಿಗೆ ಸೂಚನೆ ನೀಡಲಾಯಿತು. ಪೋಷಕರಿಂದ ಬಲವಂತವಾಗಿ ಡೊನೇಷನ್ ಪಡೆಯುವ ಅಥವಾ ಅತಿಯಾದ ಶುಲ್ಕ ವಸೂಲಿ ಮಾಡುವ ಶಾಲೆಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಅಲ್ಪಸಂಖ್ಯಾತ ಸಮುದಾಯದ ಬಡ ಮಕ್ಕಳಿಗೆ ಶಿಕ್ಷಣ ಹೊರೆಯಾಗಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಸರ್ಕಾರದ 'ಸರಳ ವಿವಾಹ' ಯೋಜನೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಗಳ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅರ್ಹ ಫಲಾನುಭವಿಗಳು ಕಚೇರಿಗಳಿಗೆ ಅಲೆಯದಂತೆ ಆನ್ಲೈನ್ ಮೂಲಕವೇ ಸೌಲಭ್ಯಗಳನ್ನು ತಲುಪಿಸಲು ಕ್ರಮ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಶಫಿಕ್ ಅಹಮದ್ ಮತ್ತು ಶಬೀರ್ ಅಹಮದ್ ಅವರು ಮಾತನಾಡಿ, ಸಮುದಾಯದ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ಮತ್ತು ಮೌಲಾನಾ ಆಜಾದ್ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಒಂದು ವರ್ಷದಿಂದ ಯಾವುದೇ ಹೊಸ ತರಬೇತಿಗಳು ನಡೆಯದಿರುವುದನ್ನು ಪ್ರಶ್ನಿಸಿದ ಅವರು, ಸಾಂಪ್ರದಾಯಿಕ ತರಬೇತಿಗಳ ಬದಲಿಗೆ ಎಐ, ಸಾಫ್ಟ್ವೇರ್ ಮತ್ತು ಮೊಬೈಲ್ ರಿಪೇರಿಯಂತಹ ಆಧುನಿಕ ತಂತ್ರಜ್ಞಾನ ಆಧಾರಿತ ಕೌಶಲ್ಯಗಳನ್ನು ಕಲಿಸಲು ಸೂಚಿಸಿದರು.

ರೇಷ್ಮೆ ಮತ್ತು ಕೃಷಿ ಇಲಾಖೆಗಳ ಯೋಜನೆಗಳಲ್ಲಿ ಅಲ್ಪಸಂಖ್ಯಾತ ರೈತರ ಸಂಖ್ಯೆ ಕಡಿಮೆ ಇರುವುದನ್ನು ಗಮನಿಸಿದ ಡಾ. ರವಿ ಅವರು, ಅಧಿಕಾರಿಗಳು ಕೇವಲ ಅಂಕಿ-ಅAಶ ನೀಡುವ ಬದಲು ಸಮುದಾಯದವರನ್ನು ತಲುಪಿ ಅವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು. ಜೈವಿಕ ಗೊಬ್ಬರ ಮತ್ತು ನ್ಯಾನೋ ಯೂರಿಯಾ ಬಳಕೆಯ ಬಗ್ಗೆ ಅರಿವು ಮೂಡಿಸಲು ತಿಳಿಸಿದರು.

ಜಿಲ್ಲೆಯಲ್ಲಿ ತಾಜಾ ಮೀನುಗಳ ಮಾರಾಟಕ್ಕೆ ಅನುಕೂಲವಾಗುವಂತೆ ಪ್ರತಿ ತಾಲ್ಲೂಕಿನಲ್ಲಿ ಮೀನು ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ನಗರಸಭೆಗಳ ಮೂಲಕ ಜಾಗ ಗುರುತಿಸಿ ಕ್ರಮ ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಗೆ ನಿರ್ದೇಶನ ನೀಡಿದರು.

ಕ್ಲಾಕ್ ಟವರ್ ಬಳಿ ಇರುವ ಹಳೆಯ ವಕ್ಫ್ ಕಟ್ಟಡವನ್ನು ನವೀಕರಿಸಿ ಅಲ್ಲಿ ಮಾಹಿತಿ ಕೇಂದ್ರ ಮತ್ತು ವಕ್ಫ್ ಕಚೇರಿಯನ್ನು ನಡೆಸುವ ಬಗ್ಗೆ ಚರ್ಚಿಸಲಾಯಿತು. ಜನದಟ್ಟಣೆ ಇರುವ ಪ್ರದೇಶದಲ್ಲಿ ಕಚೇರಿ ಇರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅನುಮತಿ ಇಲ್ಲದೆ ನಡೆಯುತ್ತಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿ ಅವುಗಳನ್ನು ಮುಚ್ಚಲು ಹಾಗೂ ಪೋಷಕರಿಂದ ಅತಿಯಾದ ಶುಲ್ಕ ಮತ್ತು ಡೊನೇಷನ್ ವಸೂಲಿ ಮಾಡುವ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಇಒಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಮಹಮದ್ ಪಾಷ, ಮಹಮದ್ ಶಬ್ಬೀರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮೈಲಾರಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕುಮಾರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರವಿಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಸೇರಿದಂತೆ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande