
ಬೆಂಗಳೂರು, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಧಾರವಾಡದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಗ್ರಿಕರ್ಗೆ 7 ವರ್ಷಗಳ to ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಸುದೀರ್ಘ ವಿಚಾರಣೆ ನಂತರ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದರು.
ಅಪರಾಧಿಗಳಿಗೆ ಶಿಕ್ಷೆ
ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ಸೆಕ್ಷನ್ 120(ಬಿ) (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಜೀವಾವಧಿ ಶಿಕ್ಷೆಗೆ ಒಳಗಾದವರಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ವಿಕ್ರಮ್, ಕೀರ್ತಿ ಕುಮಾರ್, ಸಂದೀಪ್ ಸವದತ್ತಿ, ವಿನಾಯಕ್ ಕಟಗಿ, ಮಹಾಬಲೇಶ್ವರ್ ಹೊಂಗಲ್ ಅಲಿಯಾಸ್ ಮುದಕ, ಸಂತೋಷ್ ಸವದತ್ತಿ, ಎಂ. ದಿನೇಶ್, ಎಸ್. ಅಶ್ವತ್, ಕೆ.ಎಸ್. ಸುನೀಲ್, ನಜೀರ್ ಅಹ್ಮದ್, ಶನ್ವಾಜ್, ಕೆ. ನೂತನ್, ಸಿ. ಹರ್ಷಿತ್, ಚಂದ್ರಶೇಖರ್ ಇಂಡಿ, ಚಂದ್ರು ಮಾಮ ಹಾಗೂ ವಿಕಾಸ್ ಕಲಬುರ್ಗಿ ಸೇರಿದ್ದಾರೆ.
ನ್ಯಾಯಾಲಯವು ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಆಧರಿಸಿ ಬುಧವಾರವೇ ಎಲ್ಲ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು.
ಪ್ರಕರಣದ ಹಿನ್ನೆಲೆ
2016ರ ಜೂನ್ 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ಜಿಮ್ನಲ್ಲಿ ಯೋಗೇಶ್ ಗೌಡ ಅವರನ್ನು ದಿನಪತ್ರಿಕೆ ಓದುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿ ‘ಬಿ ರಿಪೋರ್ಟ್’ ಸಲ್ಲಿಸಿದ್ದರು.
ನಂತರ ಕುಟುಂಬದ ಆಕ್ಷೇಪದ ಹಿನ್ನೆಲೆಯಲ್ಲಿ ಪ್ರಕರಣವನ್ನು ಹೈಕೋರ್ಟ್ ಆದೇಶದಂತೆ ಮರು ತನಿಖೆಗೆ ಒಳಪಡಿಸಲಾಗಿದ್ದು, 2019ರಲ್ಲಿ ಸಿಬಿಐಗೆ ವರ್ಗಾಯಿಸಲಾಯಿತು. ಸಿಬಿಐ ತನಿಖೆಯಲ್ಲಿ ಇದು ಪೂರ್ವ ಯೋಜಿತ ಹಾಗೂ ರಾಜಕೀಯ ಪ್ರೇರಿತ ಕೊಲೆ ಎಂದು ಆರೋಪಿಸಲಾಯಿತು.
2020ರಲ್ಲಿ ಸಿಬಿಐ ವಿನಯ್ ಕುಲಕರ್ಣಿಯನ್ನು ಬಂಧಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಸಾಕ್ಷ್ಯಗಳನ್ನು ಪ್ರಭಾವಿಸಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ 2025ರಲ್ಲಿ ಅವರ ಜಾಮೀನು ರದ್ದಾಗಿತ್ತು.
ದೀರ್ಘಕಾಲದ ತನಿಖೆ, ವಿಚಾರಣೆ ಹಾಗೂ ಹಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಪ್ರಕ್ರಿಯೆಗಳ ನಂತರ ಇದೀಗ ಅಂತಿಮ ತೀರ್ಪು ಪ್ರಕಟವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa