ಡಾ. ರಾಜ್ ಜನ್ಮ ದಿನಾಚರಣೆ ಅರ್ಥಪೂರ್ಣಗೊಳಿಸಲು ಸೂಚನೆ
ವಿಜಯಪುರ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮೇರುನಟ ಡಾ. ರಾಜ್ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮತ್ತು ವಿಶಿಷ್ಟವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು. ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾ
ರಾಜ್


ವಿಜಯಪುರ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮೇರುನಟ ಡಾ. ರಾಜ್ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮತ್ತು ವಿಶಿಷ್ಟವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಏಪ್ರಿಲ್ 24ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕಂದಗಲ್ ಶ್ರೀ ಹನುತರಾಯ ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಕನ್ನಡದ ನಟ ಸಾರ್ವಭೌಮರಾಗಿರುವ ಡಾ. ರಾಜ್ಕುಮಾರ್ ಅವರು ತಮ್ಮ ವಿಶಿಷ್ಟ ಅಭಿನಯದಿಂದ ಕನ್ನಡಿಗರ ಮನ ಗೆದ್ದಿದ್ದಾರೆ. ಕನ್ನಡಪರ ಹೋರಾಟಗಳಲ್ಲಿ ಭಾಗವಹಿಸಿ ನಾಡು-ನುಡಿಗೆ ಮಹತ್ತರ ಸೇವೆ ಸಲ್ಲಿಸಿರುವ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಯಶಸ್ವಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಹೊಣೆಗಾರಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಯಾವುದೇ ತೊಂದರೆಗಳಿಲ್ಲದೇ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಡಾ. ರಾಜ್ಕುಮಾರ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲು ಹಾಗೂ ವಯೋಮಿತಿ ವಿಧಿಸದೇ ಎಲ್ಲರಿಗೂ ಭಾಗವಹಿಸುವ ಅವಕಾಶ ನೀಡಲು ತೀರ್ಮಾನಿಸಲಾಯಿತು.

ಗಾಯನ ಕಾರ್ಯಕ್ರಮದ ಸುಗಮ ನಿರ್ವಹಣೆಗೆ ಮುಂಚಿತವಾಗಿ ಹೆಸರು ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಬೇಕು. ಪ್ರಸ್ತುತಿಗಳ ಪುನರಾವರ್ತನೆ ತಪ್ಪಿಸಲು ಪೂರ್ವಭಾವಿಯಾಗಿ ಪಟ್ಟಿ ಸಿದ್ಧಪಡಿಸಬೇಕು ಎಂದು ತಿಳಿಸಲಾಯಿತು. ಜೊತೆಗೆ ಕುಡಿಯುವ ನೀರು, ನಿರಂತರ ವಿದ್ಯುತ್ ಪೂರೈಕೆ, ಪೊಲೀಸ್ ಭದ್ರತೆ ಹಾಗೂ ಕಲಾವಿದರ ಸಮನ್ವಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ವಿತರಿಸುವುದರ ಜೊತೆಗೆ ಕಾರ್ಯಕ್ರಮದ ಕುರಿತು ಸಮಗ್ರ ಪ್ರಚಾರ ಕೈಗೊಳ್ಳಲು ತಿಳಿಸಲಾಯಿತು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಾನಗರ ಪಾಲಿಕೆ, ತೋಟಗಾರಿಕಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande