ಮಹಿಳಾ ಮೀಸಲಾತಿ ವಿಧೇಯಕ ವಿರೋಧ : ಕಾಂಗ್ರೆಸ್ ವಿರುದ್ಧ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆಕ್ರೋಶ
ತಿರುಗೇಟು
ಬಿಜೆಪಿ


ವಿಜಯಪುರ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳಾ ಮೀಸಲಾತಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ಇಷ್ಟು ವರ್ಷಗಳಾದರೂ ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಬದ್ಧತೆಯಿಂದ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು. ಕಳೆದ ಮೂರು ದಶಕಗಳಲ್ಲಿ ಮಹಿಳಾ ಸಬಲೀಕರಣ ಹೆಸರಿನಲ್ಲಿ ಮತ ಕೇಳಿದ ಕಾಂಗ್ರೆಸ್, ಇದೀಗ ಕೇಂದ್ರ ಸರ್ಕಾರ ತಂದಿರುವ ಮಹಿಳಾ ಮೀಸಲಾತಿ ಬಿಲ್ಗೆ ವಿರೋಧ ವ್ಯಕ್ತಪಡಿಸುವ ಮೂಲಕ ದೇಶದ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ ಎಂದು ಟೀಕಿಸಿದರು.

ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಬೇಡಿಕೆ ಬಹಳ ವರ್ಷಗಳಿಂದಲೂ ಇದ್ದು, ಅದಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ಬಿಲ್ ತಂದಿದೆ. ಲೋಕ ಸಭೆ, ರಾಜ್ಯಸಭೆ, ವಿಧಾನ ಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಈ ಕ್ರಮವನ್ನು ಕಾಂಗ್ರೆಸ್ ವಿರೋಧಿಸಿರುವುದು ಖಂಡನೀಯ ಎಂದರು. ಬಿಲ್ ಪಾಸ್ ಆದರೆ ಅದರ ಶ್ರೇಯಸ್ಸು ಬಿಜೆಪಿಗೆ ಸಿಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ ಎಂದು ಆರೋಪಿಸಿದರು.

ಡಿಲಿಮಿಟೇಷನ್ ಬಿಲ್ ಕುರಿತು ವಿರೋಧ ವ್ಯಕ್ತಪಡಿಸಬೇಕಾಗಿದ್ದ ಕಾಂಗ್ರೆಸ್, ಮಹಿಳಾ ಮೀಸಲಾತಿ ವಿಧೇಯಕಕ್ಕೆ ವಿರೋಧಿಸಿರುವುದು ದುರ್ಭಾಗ್ಯಕರ. ಮಹಿಳೆಯರ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಮಾತನಾಡಿ, ನಾರಿಶಕ್ತಿ ಅಧಿನಿಯಮಕ್ಕೆ ವಿರೋಧ ವ್ಯಕ್ತಪಡಿಸಿರುವುದು ಮಹಿಳಾ ಶಕ್ತಿಗೆ ಮಾಡಿದ ಅನ್ಯಾಯವಾಗಿದೆ. ಕಾಂಗ್ರೆಸ್ ಯಾವತ್ತಿಗೂ ಮಹಿಳಾ ವಿರೋಧಿ ಧೋರಣೆ ಹೊಂದಿದೆ ಎಂದು ಆರೋಪಿಸಿದರು. ಮಹಿಳಾ ಮೀಸಲಾತಿ ಜಾರಿಯಾದರೆ ಮಹಿಳೆಯರು ಬಿಜೆಪಿಯ ಪರ ನಿಲ್ಲುತ್ತಾರೆ ಎಂಬ ಭಯದಿಂದ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಪಟ್ಟಣಶೆಟ್ಟಿ, ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ. ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ನಡೆಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜೆಸಿಬಿ ಪಕ್ಷ ಕಟ್ಟುವುದಾಗಿ ಹೇಳಿರುವ ಯತ್ನಾಳ್ ಬಿಜೆಪಿ ಸೇರಲಾರರು ಎಂದು ತಿರುಗೇಟು ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ, ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande