
ಬೆಂಗಳೂರು, 18 ಏಪ್ರಿಲ್ (ಹಿ.ಸ.):
ಆ್ಯಂಕರ್:
ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿ ಜನರನ್ನು ನಂಬಿಸಿ, ಇದೀಗ ಪದೇ ಪದೇ ವಿದ್ಯುತ್ ದರ ಏರಿಸುವ ಮೂಲಕ ಕನ್ನಡಿಗರ ಮೇಲೆ ಹೆಚ್ಚುವರಿ ಭಾರ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ವಿದ್ಯುತ್ ದರ ಏರಿಕೆಯನ್ನು 2025ರ ಏಪ್ರಿಲ್ ತಿಂಗಳಿನಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸುವ ನಿರ್ಧಾರ ಸರ್ಕಾರದ ಜನವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಒಂದು ಕೈಯಲ್ಲಿ ಹಣ ಕೊಟ್ಟು, ಮತ್ತೊಂದು ಕೈಯಲ್ಲಿ ವಿದ್ಯುತ್ ಬಿಲ್ ಏರಿಸುವ ಮೂಲಕ ಜನರನ್ನು ಸಂಕಷ್ಟಕ್ಕೆ ತಳ್ಳಲಾಗುತ್ತಿದೆ ಎಂದು ಟೀಕಿಸಿರುವ ಅಶೋಕ, ಸ್ಮಾರ್ಟ್ ಮೀಟರ್ ಅಳವಡಿಕೆಯ ಹೆಸರಿನಲ್ಲಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳ ವೆಚ್ಚ ಮಾಡಲಾಗುತ್ತಿದೆ ಎಂದಿದ್ದಾರೆ.
ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಿದ್ದರೂ, ಬೆಲೆ ಏರಿಕೆಯಲ್ಲಿ ಮಾತ್ರ ಸರ್ಕಾರ ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಿಂದೆ ದೊಡ್ಡ ಮಟ್ಟದ ವಂಚನೆ ಇದೆ ಎಂಬುದು ಜನತೆಗೆ ಈಗ ಸ್ಪಷ್ಟವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ದರ ಏರಿಕೆಯ ನಿರ್ಧಾರವನ್ನು ಕೂಡಲೇ ಹಿಂಪಡೆಯದಿದ್ದರೆ, ಜನರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಶೋಕ ಎಚ್ಚರಿಕೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa