
ಬೆಂಗಳೂರು, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಇಂದು ಪೊಲೀಸ್ ಧ್ವಜ ದಿನಾಚರಣೆ ಹಲವಾರು ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಅಚಲ ಕರ್ತವ್ಯನಿಷ್ಠೆಗೆ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಪೊಲೀಸ್ ಇಲಾಖೆಯ ಸೇವೆಯನ್ನು ಸ್ಮರಿಸಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿದ್ದು, ಏಪ್ರಿಲ್ 2 ರಾಜ್ಯ ಪೊಲೀಸ್ ಇಲಾಖೆಗೆ ವಿಶೇಷ ಮಹತ್ವದ ದಿನವಾಗಿದ್ದು, ಪೊಲೀಸ್ ಕಾಯ್ದೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಈ ದಿನವನ್ನು ‘ಪೊಲೀಸ್ ಧ್ವಜ ದಿನ’ವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ತೊಡಗಿರುವ ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಸೇವೆ, ಶೌರ್ಯ ಹಾಗೂ ತ್ಯಾಗ ಮನೋಭಾವವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥವಾಗಿ ಹಗಲಿರುಳು ದುಡಿದು, ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸ್ಮರಿಸಿ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಶೇಷ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa