ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ; ಕುಡಿಯುವ ನೀರು ಪೂರೈಕೆ
ಬಳ್ಳಾರಿ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ನೂತನ ಜ
District Disaster Management Meeting - Drinking Water Supply


District Disaster Management Meeting - Drinking Water Supply


District Disaster Management Meeting - Drinking Water Supply


ಬಳ್ಳಾರಿ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುಂಗಭದ್ರಾ ನದಿ ಹಾಗೂ ಕಾಲುವೆ ತೀರದಲ್ಲಿಯೇ ಇದ್ದರೂ, ಕಂಪ್ಲಿ ಭಾಗದ ಸಣಾಪುರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳಿವೆ. ಪಂಪಿ0ಗ್ ಸಮಸ್ಯೆ, ಪೈಪ್ಲೈನ್ ಸೇರಿದಂತೆ ಇತರೆ ಕಾಮಗಾರಿಗಳಿದ್ದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು ಮತ್ತು ಇಂಜಿನಿಯರ್ಗಳ ನಡುವೆ ಸಮನ್ವಯದ ಕೊರತೆ ಇರುವುದು ಎದ್ದು ಕಾಣುತ್ತಿದೆ. ಇಂಜಿನಿಯರಿ0ಗ್ ವಿಭಾಗದಲ್ಲಿ ಸಾಕಷ್ಟು ಸಿಬ್ಬಂದಿ ಮತ್ತು ಹಣದ ಲಭ್ಯತೆ ಇದ್ದರೂ ಕೆಲಸಗಳು ನಡೆಯುತ್ತಿಲ್ಲ. ಅಗತ್ಯವಿದ್ದರೆ ಹೆಚ್ಚುವರಿ ಪಂಪ್ಗಳನ್ನು ಅಳವಡಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿಯವರು ನೀಡಿದ್ದಾರೆ.

ಹಾಗಾಗಿ ನೀರಿನ ಅಭಾವ ತಲೆದೋರುವ ಸಂಭವವಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಆರ್ಓ ಘಟಕಗಳ ನಿರ್ವಹಣೆಗೆ ಕ್ರಮ ವಹಿಸಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾದಲ್ಲಿ ನೀರಿನ ಟ್ಯಾಂಕರ್ ಇರಿಸಿಕೊಳ್ಳಬೇಕು. ಮುಖ್ಯವಾಗಿ ಟ್ಯಾಂಕರ್ ಗಳ ಸ್ಥಿತಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಯಾವುದೇ ರೀತಿಯ ಮೇವಿನ ಸಮಸ್ಯೆ ಇಲ್ಲ. ಆದರೂ ಸಹ ಉಲ್ಬಣಗೊಳ್ಳದಂತೆ ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಿಸಿಲಿನ ತಾಪಮಾನದ ಅಲೆ ಕುರಿತು ಜಾಗೃತಿ ಮೂಡಿಸಿ :

ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅಲೆಗಳ ಪ್ರಖರತೆ ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಬೇಕು ಎಂದು ಸಂಬ0ಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ಮುಂಗಾರು ಪೂರ್ವ ಮಳೆ ಆರಂಭಗೊಳ್ಳಲಿದ್ದು, ಗುಡುಗು-ಸಿಡಿಲು ಸಹಿತ ಮಳೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಿಡಿಲು ಆಪ್ ಅಭಿವೃದ್ಧಿ ಪಡಿಸಲಾಗಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಯವರು, ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ರಾಜಕಾಲುವೆಗಳನ್ನು ಸ್ವಚ್ಛಗೊಳಿಸಬೇಕು ಎಂದು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಅಬ್ದುಲ್ ರೆಹಮಾನ್ ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande