
ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಹಾಗೂ ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಇಳಿಸುತ್ತಾರೆ ಎಂಬ ವಿ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, “ಸೋಮಣ್ಣ ಹೈಕಮಾಂಡ್ ಅಲ್ಲ. ಕಾಂಗ್ರೆಸ್ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ” ಎಂದು ತಿರುಗೇಟು ನೀಡಿದರು. ಸೋಮಣ್ಣ ಕೆಲಸವಿಲ್ಲದ ಮಂತ್ರಿ ಅವರಿಗೆ ಇಲಾಖೆಯಿಂದ ಒಂದೇ ಒಂದು ಕಡತ ಕೂಡ ಹೋಗಲ್ಲ ಎಂದು ವ್ಯಂಗ್ಯವಾಡಿದರು.
ಇನ್ನೂ ಮಾತನಾಡಿದ ಅವರು, ಬಿಜೆಪಿ ಮುಖಂಡರು ಹಣ ಹಾಗೂ ಅಧಿಕಾರ ದುರುಪಯೋಗ ಮಾಡಿಕೊಂಡು ಚುನಾವಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸೋಲಿನ ಭಯದಿಂದ ಉಚ್ಚಾಟನೆ ಮಾಡಿದವರನ್ನೂ ಪ್ರಚಾರಕ್ಕೆ ಬಳಸುತ್ತಿದೆ ಎಂದು ಹೇಳಿದರು.
ಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವುದಕ್ಕೆ ತನ್ನ ವಿರೋಧವಿಲ್ಲ, ಆದರೆ ಎಲ್ಲ ರಾಜ್ಯಗಳಿಗೂ ಸಮವಾಗಿ ಸ್ಥಾನ ನೀಡಬೇಕು ಎಂದು ಸಿಎಂ ಅಭಿಪ್ರಾಯಪಟ್ಟರು. ಜೊತೆಗೆ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವೇ ಹೊಣೆಗಾರಿಕೆ ಹೊಂದಿದೆ ಎಂದು ಹೇಳಿ, ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘೇರಾವು ಹಾಕಬೇಕು ಎಂದು ವಾಗ್ದಾಳಿ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande