
ಗದಗ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಲೋಕಸಭೆಯಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ಒದಗಿಸುವ ‘ನಾರಿ ಶಕ್ತಿ ವಂದನಾ ಅಧಿನಿಯಮ’ಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ಪ್ರತಿಭಟನೆ ನಡೆಸಲು ಗದಗ ಜಿಲ್ಲಾ ಬಿಜೆಪಿ ಪೂರ್ವಭಾವಿ ಸಭೆ ನಡೆಸಿತು.
ಮೇ 1, 2026 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ನಿಮಿತ್ತ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶಾಸಕರಾದ ಸಿ.ಸಿ. ಪಾಟೀಲ ಅವರ ನೇತೃತ್ವದಲ್ಲಿ ಸಭೆ ಜರುಗಿತು. ಸಭೆಯಲ್ಲಿ ಪ್ರತಿಭಟನೆ ಯಶಸ್ವಿಗೊಳಿಸಲು ಅಗತ್ಯವಾದ ಕಾರ್ಯಯೋಜನೆ ಕುರಿತು ಚರ್ಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಕರೆ ನೀಡಲಾಯಿತು.
ಈ ವೇಳೆ ಮಾತನಾಡಿದ ಸಿ.ಸಿ. ಪಾಟೀಲ ಅವರು, ಮಹಿಳೆಯರ ರಾಜಕೀಯ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಐತಿಹಾಸಿಕ ಹೆಜ್ಜೆಯಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಮಹಿಳಾ ಸಬಲೀಕರಣದ ವಿರುದ್ಧ ನಿಲುವಾಗಿದೆ ಎಂದು ಆರೋಪಿಸಿದರು.
ಸಭೆಯಲ್ಲಿ ಶಾಸಕರಾದ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷರಾದ ರಾಜು ಕುರುಡಗಿ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಪಕ್ಕಿರೇಶ ರಟ್ಟಿಹಳ್ಳಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಿರ್ಮಲಾ ಕೊಳ್ಳಿ, ವಿವಿಧ ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಹಲವಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದರು.
ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಗದಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಘಟಕಗಳು ಒಗ್ಗಟ್ಟಿನಿಂದ ಕೆಲಸ ಮಾಡಲು ನಿರ್ಧರಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP