
ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ಇಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತಮ್ಮ ಗೃಹ ಕಚೇರಿಯಲ್ಲಿ ಶಾಸಕ ವಿಜಯಾನಂದ ಕಾಶೇಪ್ಪನವರ್ ಅವರು ಜನರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಬೆಳಿಗ್ಗೆಯಿಂದಲೇ ವಿವಿಧ ಭಾಗಗಳಿಂದ ಆಗಮಿಸಿದ ನಾಗರಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತಂದರು.
ನೀರು ಸರಬರಾಜು, ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ವಿದ್ಯುತ್ ಸಮಸ್ಯೆಗಳು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕುರಿತ ಅಹವಾಲುಗಳು ಹೆಚ್ಚು ಗಮನಸೆಳೆದವು. ಕೆಲವು ನಾಗರಿಕರು ತಮ್ಮ ವೈಯಕ್ತಿಕ ಸಮಸ್ಯೆಗಳಾದ ಪಿಂಚಣಿ, ಭೂಮಿ ದಾಖಲೆ, ಮನೆ ನಿರ್ಮಾಣ ಅನುಮತಿ ಸೇರಿದಂತೆ ವಿವಿಧ ಆಡಳಿತಾತ್ಮಕ ವಿಚಾರಗಳನ್ನೂ ಶಾಸಕರ ಮುಂದೆ ಮಂಡಿಸಿದರು.
ಪ್ರತಿ ಅಹವಾಲನ್ನು ಶಾಸಕರು ಶ್ರದ್ಧೆಯಿಂದ ಆಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದಾಗಿ ಭರವಸೆ ನೀಡಿದ ಅವರು, ಜನರೊಂದಿಗೆ ನೇರ ಸಂಪರ್ಕದಲ್ಲಿದ್ದು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದು ತಮ್ಮ ಕರ್ತವ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಅಹವಾಲುಗಳನ್ನು ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲು ಸಹಕರಿಸಿದರು. ಶಾಸಕ ವಿಜಯಾನಂದ ಕಾಶೇಪ್ಪನವರ್ ಅವರ ಈ ಜನಸಂಪರ್ಕ ಕಾರ್ಯಕ್ರಮದಿಂದ ಜನರಲ್ಲಿ ವಿಶ್ವಾಸ ಮೂಡಿದ್ದು, ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ
ಹಿಂದೂಸ್ತಾನ್ ಸಮಾಚಾರ್ / jyothi deshpande