
ಬೆಂಗಳೂರು, 07 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿರುವ ವಿಚಾರಕ್ಕೆ ಸಂಬಂಧಿಸಿ, ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿರುವ ತಮ್ಮ ಹೇಳಿಕೆಯಲ್ಲಿ, ರಾಜ್ಯದಲ್ಲಿ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಕುಸಿಯುವ ಸ್ಥಿತಿಯಲ್ಲಿವೆ ಎಂದು ಆರೋಪಿಸಿರುವ ಅವರು, ಇಂತಹ ಪರಿಸ್ಥಿತಿಯ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಸಮಸ್ಯೆಗಳತ್ತ ಗಮನ ಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
“ಮಕ್ಕಳು ಶಿಕ್ಷಣ ಪಡೆಯಲು ಶಾಲೆಗೆ ಬರಬೇಕೇ, ಅಥವಾ ಕುಸಿಯುವ ಹಂತದಲ್ಲಿರುವ ಕಟ್ಟಡಗಳಿಗೆ ಬಲಿಯಾಗಲು ಬರಬೇಕೇ?” ಎಂದು ಪ್ರಶ್ನಿಸಿರುವ ಅಶೋಕ ಅವರು, ಸರ್ಕಾರದ ಶಿಕ್ಷಣ ಕ್ಷೇತ್ರದ ಮೇಲಿನ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ಇದಲ್ಲದೆ, “ನಿಮ್ಮ ಕುಟುಂಬದ ಮಕ್ಕಳು ಇಂತಹ ಶಾಲೆಗಳಲ್ಲಿ ಓದುತ್ತಿದ್ದರೆ ನೀವು ಏನು ಮಾಡುತ್ತಿದ್ದಿರಿ?” ಎಂದು ಸಿಎಂಗೆ ಪ್ರಶ್ನೆ ಎತ್ತಿರುವ ಅವರು, ಸರ್ಕಾರಿ ಶಾಲೆಗಳ ನಿರ್ವಹಣೆ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa