


ಬಳ್ಳಾರಿ, 07 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕೇಂದ್ರದಲ್ಲಿ ಏ.20 ರಂದು ಬಸವ ಜಯಂತಿ, ಏ.21 ರಂದು ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಏ.23 ರಂದು ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಅಧಿಕಾರಿಗಳು, ಸಮುದಾಯದ ಮುಖಂಡರೊ0ದಿಗೆ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏ.20 ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ, ಏ.21 ರಂದು ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ನಗರದ ಸಂಗನಕಲ್ಲು ರಸ್ತೆಯ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ಹಾಗೂ ಏ.23 ರಂದು ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಯಿತು. ಅದರಂತೆ ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಯಂತಿ ಆಚರಣೆಯ ಸಂದರ್ಭದಲ್ಲಿ ಡಿಜೆ ಬಳಕೆ ಮತ್ತು ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವೇದಿಕೆ ಕಾರ್ಯಕ್ರಮದ ಆವರಣದಲ್ಲಿ ಮಾತ್ರ ಬ್ಯಾನರ್ ಅಳವಡಿಸಲು ಅವಕಾಶವಿದ್ದು, ನಗರದ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕುವುದನ್ನು ನಿರ್ಬಂಧಿಸಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿವೆ. ವಚನ ಸಂಗೀತ ಗಾಯನ ಏರ್ಪಡಿಸಬೇಕು ಎಂದರು.
ಸಾ0ಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವಿವಿಧ ಇಲಾಖೆಗಳ ವತಿಯಿಂದ ಸ್ತಬ್ಧಚಿತ್ರ ಆಯೋಜಿಸಲಾಗುವುದು ಎಂದು ತಿಳಿಸಿದ ಅವರು, ಜಯಂತಿ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು.
ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ-ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್