
ವಿಜಯಪುರ, 01 ಮೇ (ಹಿ.ಸ.) :
ಆ್ಯಂಕರ್ : ರಾಜ್ಯ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ಗರಿಗೆದರಿರುವ ನಡುವೆ, ವಿಜಯಪುರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಸ್ಪಷ್ಟಪಡಿಸಿದರು. ಪಕ್ಷದ ಹಿರಿಯ ನಾಯಕರು ಮತ್ತು ಹೈಕಮಾಂಡ್ ಸೂಚನೆಗಳನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಇದೇ ವೇಳೆ, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಉಲ್ಲೇಖಿಸಿದ ಸಚಿವರು, “ಅವರು ನಮ್ಮ ಸುಪ್ರೀಂ ನಾಯಕರು. ಅವರು ಏನು ಹೇಳುತ್ತಾರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ತಿಳಿಸಿದರು.
ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಪರಿಸ್ಥಿತಿ ಉದ್ಭವಿಸಿದರೆ, ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಲೆಬಾಗಿ ಒಪ್ಪಿಕೊಳ್ಳುವುದು ನಮ್ಮ ಪಕ್ಷದ ಸಂಸ್ಕೃತಿ ಎಂದರು.
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್ ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande