
ಬೆಂಗಳೂರು, 13 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇರುವ ವಿಚಾರವನ್ನು ಮುಂದಿಟ್ಟುಕೊಂಡು, ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 38,163 ಶಿಕ್ಷಕರ ಹುದ್ದೆಗಳು ಖಾಲಿ ಇರುವುದನ್ನು ಉಲ್ಲೇಖಿಸಿ, ಇದು ಕೇವಲ ಆಡಳಿತ ವೈಫಲ್ಯವಲ್ಲ; ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ನಿಧಾನವಾಗಿ ಕುಸಿಯಲು ಬಿಡುತ್ತಿರುವ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ.
“ರಾಜ್ಯದಲ್ಲಿ ಶೇಕಡಾ 22ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೆ ಶಾಲೆಗಳು ಹೇಗೆ ನಡೆಯಬೇಕು? ತರಗತಿಯಲ್ಲಿ ಶಿಕ್ಷಕರೇ ಇಲ್ಲದಿದ್ದರೆ ಬಡ ಮಕ್ಕಳಿಗೆ ಅಕ್ಷರ ಯಾರು ಕಲಿಸಬೇಕು?” ಎಂದು ಪ್ರಶ್ನಿಸಿರುವ ಅಶೋಕ್, ಸರ್ಕಾರ ಘೋಷಿಸಿದ್ದ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಏಕೆ ಮುಂದುವರಿಯುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು, ಸಮಾವೇಶಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಆದರೆ ಶಿಕ್ಷಕರ ನೇಮಕಾತಿಗೆ ಮಾತ್ರ ಹಣದ ಕೊರತೆ ತೋರಿಸಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
“ಶಿಕ್ಷಕರಿಲ್ಲದ ಶಾಲೆ ಎಂದರೆ ಅದು ಕೇವಲ ಖಾಲಿ ಕಟ್ಟಡ. ಅಲ್ಲಿ ಶಿಕ್ಷಣ ಸಾಯುತ್ತದೆ, ಬಡ ಮಕ್ಕಳ ಭವಿಷ್ಯ ಕತ್ತಲೆಯಾಗುತ್ತದೆ” ಎಂದು ಹೇಳಿರುವ ಅಶೋಕ್, ಸರ್ಕಾರಿ ಶಾಲೆಗಳನ್ನು ದುರ್ಬಲಗೊಳಿಸಿ ಮುಂದಿನ ದಿನಗಳಲ್ಲಿ ಮುಚ್ಚುವ ಹುನ್ನಾರ ನಡೆಯುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ ಎಂದು ಆರೋಪಿಸಿದ್ದಾರೆ.
ತಕ್ಷಣವೇ ಪೂರ್ಣ ಪ್ರಮಾಣದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿ, ಸರ್ಕಾರಿ ಶಾಲೆಗಳನ್ನು ಉಳಿಸುವ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.