
ಬಾಗಲಕೋಟೆ, 13 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲಸೌಲಭ್ಯಗಳ ಕಲ್ಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಗ್ರಾಮಸ್ಥರು ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್, ವಸತಿ ಸೌಲಭ್ಯ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಸಂತ್ರಸ್ತರು ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಧರಣಿ ಸ್ಥಳದಲ್ಲಿ ಮಹಿಳೆಯರು, ಹಿರಿಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಸರ್ಕಾರ ತಕ್ಷಣವೇ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
“ನಮ್ಮ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ. ಅಧಿಕಾರಿಗಳು ಕೇವಲ ಭರವಸೆ ನೀಡುತ್ತಿದ್ದಾರೆ ಹೊರತು ಯಾವುದೇ ಭರವಸೆ ಕಾರ್ಯರೂಪಕ್ಕೆ ತರಲಾಗುತ್ತಿಲ್ಲ” ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿ ಆಕ್ರೋಶ ಹೊರಹಾಕಿದರು. ಹಲವು ದಿನಗಳಿಂದ ಧರಣಿ ನಡೆಯುತ್ತಿದ್ದರೂ ಯಾವುದೇ ಜನಪ್ರತಿನಿಧಿ ಅಥವಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸದಿರುವುದಕ್ಕೆ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.
ಸಂತ್ರಸ್ತರ ಪ್ರಮುಖ ಬೇಡಿಕೆಗಳಾದ ಮೂಲಸೌಲಭ್ಯಗಳ ಒದಗಿಕೆ, ಶಾಶ್ವತ ಪರಿಹಾರ ಕ್ರಮಗಳು ಹಾಗೂ ಸರ್ಕಾರದಿಂದ ಸೂಕ್ತ ನೆರವು ನೀಡುವಂತೆ ಆಗ್ರಹಿಸಲಾಗಿದೆ. ಬೇಡಿಕೆಗಳು ಈಡೇರಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ವೇಳೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಧರಣಿಗೆ ಬೆಂಬಲ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande