
ಬೆಂಗಳೂರು, 13 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣ ಹವೆ ಹಾಗೂ ತೀವ್ರ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನ ನಂತರ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗಬಹುದಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಬಿಸಿ ಗಾಳಿ ಮತ್ತು ಹೆಚ್ಚಿದ ತೇವಾಂಶದ ಪರಿಸ್ಥಿತಿಯಿಂದ ಉಕ್ಕುವ ಬಿಸಿಲು ಜನರನ್ನು ಕಂಗೆಡಿಸುವ ಸಾಧ್ಯತೆ ಇದೆ.
ಇನ್ನೊಂದೆಡೆ, ರಾಜ್ಯದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ತೆರವಾದ ಪ್ರದೇಶಗಳಲ್ಲಿ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಮನವಿ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.