ಸಾರಿಗೆ ಸೇವೆ ಕುರಿತು ಸಾರ್ವಜನಿಕರೊಂದಿಗೆ ನೇರ ಸಂವಾದ
ವಿಜಯಪುರ, 14 ಮೇ (ಹಿ.ಸ.) : ಆಂಕರ್ : ಸಾರ್ವಜನಿಕರಿಗೆ ಉತ್ತಮ ಹಾಗೂ ಸುಗಮ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ವಿಜಯಪುರ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಫೋನ್-ಇನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲ
ಫೋನ್ ಇನ್


ವಿಜಯಪುರ, 14 ಮೇ (ಹಿ.ಸ.) :

ಆಂಕರ್ : ಸಾರ್ವಜನಿಕರಿಗೆ ಉತ್ತಮ ಹಾಗೂ ಸುಗಮ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ವಿಜಯಪುರ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಫೋನ್-ಇನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭಾಗವಹಿಸಿ ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿದರು.

ಫೋನ್-ಇನ್ ಕಾರ್ಯಕ್ರಮದ ಮೂಲಕ ಜಿಲ್ಲೆಯ ವಿವಿಧ ಭಾಗಗಳಿಂದ ಸಾರ್ವಜನಿಕರು ಕರೆ ಮಾಡಿ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದ ಪ್ರಶ್ನೆಗಳು, ಸಮಸ್ಯೆಗಳು ಹಾಗೂ ಸಲಹೆಗಳನ್ನು ಹಂಚಿಕೊಂಡರು. ಗ್ರಾಮೀಣ ಭಾಗಗಳಲ್ಲಿ ಬಸ್ ಸೌಲಭ್ಯ ಕೊರತೆ, ವಿದ್ಯಾರ್ಥಿಗಳಿಗೆ ಅನುಕೂಲಕರ ವೇಳಾಪಟ್ಟಿ, ಕೆಲವು ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ, ಬಸ್ ಸಮಯ ಪಾಲನೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಜನರಿಂದ ಬಂದ ಪ್ರತಿಯೊಂದು ಸಮಸ್ಯೆಗೂ ಗಮನಹರಿಸಿದ ಜಿಪಂ ಸಿಇಒ ರಿಷಿ ಆನಂದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಸಾರಿಗೆ ಸೇವೆ ಜನಜೀವನದ ಅವಿಭಾಜ್ಯ ಅಂಗವಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರಿಗೆ ಸುಲಭ ಮತ್ತು ಸುರಕ್ಷಿತ ಪ್ರಯಾಣ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಕೆಕೆಆರ್ಟಿಸಿ ಅಧಿಕಾರಿಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಮಾರ್ಗಗಳಲ್ಲಿ ಬಸ್ ಸಂಚಾರ ವ್ಯವಸ್ಥೆ, ಹೊಸ ಸೇವೆಗಳ ಪ್ರಾರಂಭ, ವಿದ್ಯಾರ್ಥಿ ಪಾಸ್ ಸೌಲಭ್ಯ ಹಾಗೂ ಪ್ರಯಾಣಿಕರ ಸುರಕ್ಷತೆ ಕುರಿತು ಮಾಹಿತಿ ನೀಡಿದರು. ಜನರಿಂದ ಬಂದ ಅನೇಕ ಸಲಹೆಗಳನ್ನು ಪರಿಗಣಿಸಿ, ಸಾಧ್ಯವಾದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಫೋನ್-ಇನ್ ಕಾರ್ಯಕ್ರಮವು ಸಾರ್ವಜನಿಕರು ಹಾಗೂ ಸಾರಿಗೆ ಇಲಾಖೆಯ ನಡುವೆ ನೇರ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದು, ಜನರ ವಿಶ್ವಾಸ ಹೆಚ್ಚಿಸಲು ಸಹಕಾರಿ ಆಯಿತು. ಸಾರ್ವಜನಿಕರ ಸಮಸ್ಯೆಗಳನ್ನು ತಕ್ಷಣ ಆಲಿಸಿ ಪರಿಹಾರ ಕಂಡುಕೊಳ್ಳುವ ಈ ರೀತಿಯ ಕಾರ್ಯಕ್ರಮಗಳು ಆಡಳಿತ ಮತ್ತು ಜನರ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ಸಾರಿಗೆ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಾಗೂ ಜನಸ್ನೇಹಿಯಾಗಿ ರೂಪಿಸಲು ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಂವಾದಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande