
ಕೋಲ್ಕತ್ತಾ, 14 ಮೇ (ಹಿ.ಸ.) :
ಆ್ಯಂಕರ್ : ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಕೋಲ್ಕತ್ತಾ ಉಚ್ಚ ನ್ಯಾಯಾಲಯಕ್ಕೆ ವಕೀಲರ ವೇಷದಲ್ಲಿ ಆಗಮಿಸಿ ಎಲ್ಲರ ಗಮನ ಸೆಳೆದರು.
ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಕಪ್ಪು ವಕೀಲರ ಉಡುಪು ಧರಿಸಿ ನ್ಯಾಯಾಲಯದ ಆವರಣಕ್ಕೆ ಬಂದ ಮಮತಾ ಬ್ಯಾನರ್ಜಿ ಅವರನ್ನು ಕಂಡು ವಕೀಲರು ಹಾಗೂ ಸಾರ್ವಜನಿಕರು ಆಶ್ಚರ್ಯ ವ್ಯಕ್ತಪಡಿಸಿದರು.
ಚುನಾವಣೋತ್ತರ ಹಿಂಸಾಚಾರ ಪ್ರಕರಣದ ವಿಚಾರಣೆಯಲ್ಲಿ ತಮ್ಮ ಪರವಾಗಿ ವಾದ ಮಂಡಿಸಲು ಅವರು ನ್ಯಾಯಾಲಯಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.
ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಹಾಗೂ ನ್ಯಾಯಮೂರ್ತಿ ಪಾರ್ಥಸಾರಥಿ ಸೇನ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯಿತು.
ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಹಿಂಸಾಚಾರ ಮತ್ತು ಉದ್ವಿಗ್ನ ಘಟನೆಗಳು ನಡೆದಿರುವ ಕುರಿತು ಆರೋಪಗಳು ಕೇಳಿ ಬಂದಿದ್ದವು. ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ನಡೆಯುತ್ತಿದೆ.
ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಪುತ್ರ ಹಾಗೂ ವಕೀಲ ಶೀರ್ಷಮಾನ್ಯ ಬ್ಯಾನರ್ಜಿ ಈ ಅರ್ಜಿಯನ್ನು ಸಲ್ಲಿಸಿರುವುದಾಗಿ ವರದಿಯಾಗಿದೆ.
ವಿಚಾರಣೆ ಆರಂಭಕ್ಕೂ ಮುನ್ನವೇ ನ್ಯಾಯಾಲಯಕ್ಕೆ ಆಗಮಿಸಿದ ಮಮತಾ ಬ್ಯಾನರ್ಜಿ ಅವರ ಹಾಜರಾತಿ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.