
ಬಾಗಲಕೋಟೆ, 14 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ದೇಶದಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ರಾಷ್ಟ್ರೀಯ ವಿಧ್ಯಾರ್ಥಿ ಒಕ್ಕೂಟ
ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಮಾತನಾಡಿದ NSU ಜಿಲ್ಲಾಧ್ಯಕ್ಷ ರಾಮು “ದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದ ನೀಟ್ ಹಗರಣದಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಸ್ಪಷ್ಟವಾಗಿದೆ. ಈ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೈತಿಕ ಹೊಣೆಗಾರಿಕೆ ಇದೆ. ಕೂಡಲೇ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.
ದೇಶದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಗಳಂತಹ ಘಟನೆಗಳು ವಿದ್ಯಾರ್ಥಿಗಳ ನಂಬಿಕೆಗೆ ಧಕ್ಕೆ ತರುತ್ತಿವ ಎಂದು ಹೇಳಿದರು. “ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದ್ದಾರೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿದಿದೆ.ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಹಾಳು ಮಾಡುತ್ತಿದೆ” ಎಂದು ಆರೋಪಿಸಿದರು.
ಮುಂದುವರಿದು ಮಾತನಾಡಿದ ಅವರು, “ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳುವ ಸರ್ಕಾರ, ಇಂತಹ ದೊಡ್ಡ ಹಗರಣಗಳ ಸಂದರ್ಭದಲ್ಲಿ ಮೌನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ದೇಶದ ಯುವಜನತೆಗೆ ನ್ಯಾಯ ಸಿಗಬೇಕಾದರೆ ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದರು.
NSU ಮುಖಂಡರು ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು. “ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಅವಕಾಶ ಸಿಗುವ ಬದಲು, ಹಣ ಮತ್ತು ಪ್ರಭಾವಕ್ಕೆ ಮಹತ್ವ ಸಿಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಕನಸುಗಳನ್ನು ರಾಜಕೀಯ ಲಾಭಕ್ಕಾಗಿ ಬಲಿಕೊಡಬಾರದು” ಎಂದು ಹೇಳಿದರು.
ವಿದ್ಯಾರ್ಥಿ ಮುಖಂಡರು ಹಾಗೂ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನೀಟ್ ಹಗರಣದ ಸಂಪೂರ್ಣ ಸತ್ಯ ಹೊರ ಬರಬೇಕೆಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande