
ಬಾಗಲಕೋಟೆ, 02 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಸೋಮವಾರ ತೋಟಗಾರಿಕಾ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಸಿದ್ದಾರ್ಥ್ ಗೋಯಲ್ ಅವರು ಭದ್ರತಾ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.
ಮತ ಎಣಿಕೆ ನಡೆಯುವ ಸ್ಥಳದಲ್ಲಿ ಮೂರು ಹಂತದ ಭದ್ರತಾ ವಲಯವನ್ನು ರೂಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಹಾಗೂ ರಾಜ್ಯ ಪಡೆಗಳ ಜೊತೆಗೆ ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 24 ಗಂಟೆಗಳ ನಿಗಾವಹಣೆ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಈ ಬಾರಿ ಪಕ್ಷದ ಏಜೆಂಟರು ಮತ್ತು ಅಧಿಕೃತರಿಗೆ ಪ್ರವೇಶ ನೀಡುವಲ್ಲಿ ನವೀನ ತಂತ್ರಜ್ಞಾನ ಬಳಸಲಾಗುತ್ತಿದೆ.
ಪ್ರವೇಶದ್ವಾರಗಳಲ್ಲಿ ಮೂರು ಕಡೆ ಕ್ಯೂಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆ ಅಳವಡಿಸಲಾಗಿದ್ದು, ಗುರುತಿನ ಚೀಟಿ ಪರಿಶೀಲನೆಯೊಂದಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ನಂತರ ಮಾತ್ರ ಒಳಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇದರಿಂದ ಭದ್ರತೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಎಸ್ಪಿ ತಿಳಿಸಿದರು.
ಮತ ಎಣಿಕೆ ಕೇಂದ್ರದ ಸುತ್ತಮುತ್ತ ವಾಹನ ಸಂಚಾರ ನಿಯಂತ್ರಣಕ್ಕೆ ವಿಶೇಷ ಟ್ರಾಫಿಕ್ ವ್ಯವಸ್ಥೆ ರೂಪಿಸಲಾಗಿದ್ದು, ಸಾರ್ವಜನಿಕರಿಗೆ ಅನಾವಶ್ಯಕವಾಗಿ ಸ್ಥಳಕ್ಕೆ ಆಗಮಿಸದಂತೆ ಮನವಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಚುನಾವಣಾ ಪ್ರಕ್ರಿಯೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande