ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ, ಮೆಟ್ರೋ ಸೇವೆಯಲ್ಲಿ ಭಾರಿ ವಿಳಂಬ
ಬೆಂಗಳೂರು, 21 ಮೇ (ಹಿ.ಸ.) : ಆ್ಯಂಕರ್ : ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಆಲಿಕಲ್ಲು, ಬಿರುಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ರಾಜ್ಯ ಹವಾಮಾನ ಇಲಾಖೆ ನಗರದ ಹಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷ
Rain


ಬೆಂಗಳೂರು, 21 ಮೇ (ಹಿ.ಸ.) :

ಆ್ಯಂಕರ್ : ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಆಲಿಕಲ್ಲು, ಬಿರುಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ರಾಜ್ಯ ಹವಾಮಾನ ಇಲಾಖೆ ನಗರದ ಹಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ನಗರದ ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ತೀವ್ರಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಎಚ್ಚರಿಕೆ ವಿಸ್ತರಿಸಲಾಗಿದೆ. ಜನರು ಅಗತ್ಯವಿದ್ದಲ್ಲಿ ಮಾತ್ರ ಹೊರಗೆ ಸಂಚರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸಂಜೆ 6 ಗಂಟೆಯ ಬಳಿಕ ಆರಂಭವಾದ ಮಳೆ ಕೆಲವೇ ಕ್ಷಣಗಳಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಾಗಿ ಮಾರ್ಪಟ್ಟಿತು. ವಿಧಾನಸೌಧ, ಕಬ್ಬನ್ ಪಾರ್ಕ್, ಕಾರ್ಪೋರೇಷನ್ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ನಿರಂತರ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಪರದಾಡುವಂತಾಯಿತು.

ಖನಿಜ ಭವನ ಮುಂಭಾಗದಲ್ಲಿ ಬೃಹತ್ ಮರವೊಂದು ಧರೆಗುರುಳಿದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರೇಸ್ ಕೋರ್ಸ್ ರಸ್ತೆ ಪ್ರದೇಶದಲ್ಲಿ ದೀರ್ಘ ವಾಹನ ಸರತಿ ಕಂಡುಬಂದಿತು.

ಭಾರೀ ಮಳೆಯ ಪರಿಣಾಮ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವ್ಯಾಪ್ತಿಯ ಮೆಟ್ರೋ ಸೇವೆಯ ಮೇಲೂ ಪರಿಣಾಮ ಬೀರಿದೆ. ಹಸಿರು ಮತ್ತು ನೇರಳೆ ಮಾರ್ಗ ಸೇರಿದಂತೆ ಹಲವು ಮಾರ್ಗಗಳ ರೈಲು ಸಂಚಾರದಲ್ಲಿ ಭಾರಿ ವಿಳಂಬ ಉಂಟಾಗಿದ್ದು, ಸಾವಿರಾರು ಪ್ರಯಾಣಿಕರು ನಿಲ್ದಾಣಗಳಲ್ಲಿ ಕಾಯುವಂತಾಯಿತು.

ಈ ಕುರಿತು ತುರ್ತು ಪ್ರಕಟಣೆ ಹೊರಡಿಸಿರುವ ಬಿಎಂಆರ್ಸಿಎಲ್, “ಭಾರೀ ಗಾಳಿ ಹಾಗೂ ಮಳೆಯ ಹಿನ್ನೆಲೆ ಸುರಕ್ಷತಾ ಕಾರಣಗಳಿಂದ ರೈಲುಗಳ ಕಾರ್ಯಾಚರಣೆಯಲ್ಲಿ ವಿಳಂಬ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಸಾರ್ವಜನಿಕರು ಸಿಬ್ಬಂದಿಯೊಂದಿಗೆ ಸಹಕರಿಸಬೇಕು” ಎಂದು ಮನವಿ ಮಾಡಿದೆ.

ಹವಾಮಾನ ಇಲಾಖೆ ಮುಂದಿನ ಕೆಲ ಗಂಟೆಗಳ ಕಾಲ ಮಳೆ, ಗುಡುಗು ಹಾಗೂ ಬಿರುಗಾಳಿ ಮುಂದುವರಿಯುವ ಸಾಧ್ಯತೆ ಇರುವುದಾಗಿ ತಿಳಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande