ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರ ನೇರ ಹೊಣೆ : ಸಿದ್ದರಾಮಯ್ಯ
ಬೆಂಗಳೂರು, 21 ಮೇ (ಹಿ.ಸ.) : ಆ್ಯಂಕರ್ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಹೊಣೆಗಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕಿದ್ದು, ದೇಶದ ವಿದ್ಯಾರ್ಥಿಗಳ ಬಳಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್
Protest


ಬೆಂಗಳೂರು, 21 ಮೇ (ಹಿ.ಸ.) :

ಆ್ಯಂಕರ್ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಹೊಣೆಗಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕಿದ್ದು, ದೇಶದ ವಿದ್ಯಾರ್ಥಿಗಳ ಬಳಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ನಗರದ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಕಾಲೇಜುಗಳ ಪ್ರವೇಶ ಪರೀಕ್ಷೆಯನ್ನು ಕೇಂದ್ರದ ಬದಲು ರಾಜ್ಯಗಳೇ ನಡೆಸುವ ವ್ಯವಸ್ಥೆಯನ್ನು ಮರು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

2016ರಲ್ಲಿ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಜಾರಿಗೆ ತಂದ ಬಳಿಕ ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿಎಂ, ವಿದ್ಯಾರ್ಥಿಗಳು ವರ್ಷಪೂರ್ತಿ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸಿದರೂ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಅವರ ಭವಿಷ್ಯ ಹಾಳಾಗುತ್ತಿದೆ ಎಂದು ಹೇಳಿದರು.

“ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಹಿಂದೆ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ಆದರೆ ನೀಟ್ ಜಾರಿಯಾದ ಬಳಿಕ ಕೋಚಿಂಗ್ ಕೇಂದ್ರಗಳ ಅವಲಂಬನೆ ಹೆಚ್ಚಿದ್ದು, ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ” ಎಂದು ಟೀಕಿಸಿದರು.

ಬಿಜೆಪಿ ಆಡಳಿತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂಜಿನಿಯರ್ ಹಾಗೂ ಸಬ್ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗಳಲ್ಲೂ ಅಕ್ರಮಗಳು ನಡೆದಿದ್ದನ್ನು ಉಲ್ಲೇಖಿಸಿದರು.

ದೇಶದಲ್ಲಿ ಯುವ ನಿರುದ್ಯೋಗ ಹೆಚ್ಚಾಗಿದ್ದು, ಪ್ರಧಾನಿ ಮೋದಿ ನೀಡಿದ್ದ ಉದ್ಯೋಗ ಭರವಸೆ ಈಡೇರಿಲ್ಲ ಎಂದು ಟೀಕಿಸಿದ ಸಿದ್ದರಾಮಯ್ಯ, “ಬಿಜೆಪಿ ಹಾಗೂ ಆರ್ಎಸ್ಎಸ್ ಸಮಾಜದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿವೆ” ಎಂದು ದೂರಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಹತಾಶರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಪ್ರಕರಣಕ್ಕೆ ಕಾರಣರಾದವರನ್ನು ಕೊಲೆಗಾರರಂತೆ ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದರು.

ಕೇಂದ್ರ ಸರ್ಕಾರ ಇನ್ನು ಮುಂದೆ ನೀಟ್ ಪರೀಕ್ಷೆ ನಡೆಸದೇ, ರಾಜ್ಯಗಳಿಗೆ ಪರೀಕ್ಷೆ ನಡೆಸುವ ಅಧಿಕಾರ ನೀಡಬೇಕು ಎಂದು ಸಿಎಂ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ ಬಾನು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಹಲವು ಮುಖಂಡರು, ಸಚಿವರು ಹಾಗೂ ಶಾಸಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande